ಬೆಂಗಳೂರು: ನಡ್ಡಾ ಮಾತಿನಂತೆ ನಡೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಸೋತರೆ ಕೇಂದ್ರ ಅನುದಾನ ಸ್ಥಗಿತ ಎಂದು ಹೇಳಿದ್ದರು. ಈಗ ಕರ್ನಾಟಕ ರಾಜ್ಯಕ್ಕೆ ಅಕ್ಕಿ ಖರೀದಿಗೆ ಅವಕಾಶ ತಪ್ಪಿಸುವ ಮೂಲಕ ತಮ್ಮ ಮಾತು ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಒಕ್ಕೂಟ ವ್ಯವಸ್ಥೆಯಲ್ಲಿ ಕೆಲಸ ಮಾಡುವುದಾಗಿ ಪ್ರಧಾನ ಮಂತ್ರಿಗಳು ಹೇಳಿಕೆ ನೀಡಿದ್ದರು. ಆದರೆ ಬಿಜೆಪಿ ಅಧ್ಯಕ್ಷರು ಮತದಾರರನ್ನು ಬೆದರಿಸಿದ್ದರು ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಮಾಡಿದ್ದು, ಮುಂದಿನ ತಿಂಗಳಿಂದ ಯೋಜನೆ ಜಾರಿಗೆ ತೀರ್ಮಾನ ಮಾಡಿದ್ದೆವು. ಇದಕ್ಕಾಗಿ ಭಾರತೀಯ ಆಹಾರ ಪ್ರಾಧಿಕಾರಕ್ಕೆ ಅಕ್ಕಿ ಖರೀದಿಗೆ ಮನವಿ ಮಾಡಿದ್ದೆವು. ಪ್ರಾಧಿಕಾರ ಕೂಡ ಜೂನ್ 12ರಂದು ಜುಲೈ ತಿಂಗಳಲ್ಲಿ ಇ ಹರಾಜು ಮೂಲಕ ಅಕ್ಕಿ ನೀಡುವುದಾಗಿ ಅನುಮತಿ ನೀಡಿತ್ತು ಎಂದರು. ಈ ಮೂಲಕ ಬಿಜೆಪಿ ಬಡವರಿಗೆ ದ್ರೋಹ ಮಾಡುತ್ತಿದೆ. ಬಡವರ ಹೊಟ್ಟೆ ಮೇಲೆ ಬರೆ ಎಳೆದಿದೆ. ಬಿಜೆಪಿ ಎಂದರೆ ಬಡವರಿಗೆ ದ್ರೋಹ ಬಗೆಯುವ ಪಕ್ಷವಾಗಿದೆ. ಕೇಂದ್ರದ ಈ ದ್ರೋಹ ಖಂಡಿಸಿ ಜೂನ್ 20ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದಿದ್ದಾರೆ.