ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿದ್ದ 545 ಪಿಎಸ್‌ಐ ನೇಮಕಾತಿ ಹಗರಣದ ಪ್ರಕರಣವನ್ನು ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ” ಪಿಎಸ್‌ಐ ನೇಮಕಾತಿ ಹಗರಣದ ಗಂಭೀರ ಸ್ವರೂಪ ಮತ್ತು ಸಾರ್ವಜನಿಕ ಮಹತ್ವದ ಹಿನ್ನೆಲೆಯ ಕಾರಣಕ್ಕಾಗಿ ಮುಂದಿನ ತನಿಖೆಯನ್ನು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ಆಯೋಗದ ಮೂಲಕ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಿದ್ದೇವೆ. ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ.” ಎಂದಿದ್ದಾರೆ.
ಅಕ್ರಮ ಬಯಲಿಗೆ ಬರುತ್ತಿದ್ದಂತೆ ಬಿಜೆಪಿ ಸರ್ಕಾರ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಬೃಹತ್ ಹೋರಾಟ ನಡೆಸಿತ್ತು. ಈ ಅಕ್ರಮವನ್ನು ತನಿಖೆ ನಡೆಸುವುದಾಗಿ ಕಾಂಗ್ರೆಸ್ ಮೊದಲಿನಿಂದಲೂ ಹೇಳುತ್ತಿತ್ತು. ಅದರಂತೆ ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ರಮವನ್ನು ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ.