ಧಾರವಾಡ : ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೂರು ಜನ ಕಾರ್ಮಿಕರು ಮೃತಪಟ್ಟಿದ್ದು, ನಿರ್ಲಕ್ಷ್ಯ ವಹಿಸಿದ ಕಟ್ಟಡದ ಗುತ್ತಿಗೆದಾರರ ಮೇಲೆ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಸೂಚಿಸಿದ್ದಾರೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕಾರಿಗಳಿಗೆ ದುರಂತದ ಬಗ್ಗೆ ವರದಿ ನೀಡುವಂತೆ ಸೂಚಿಸಿರುವ ಸಚಿವರು, ಮೃತ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅಗತ್ಯ ಸಹಾಯ ನೀಡಲು ಆದೇಶಿಸಿದ್ದಾರೆ. ಮುಂದೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ.
ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಚಿವರು ಮಾತನಾಡಿದ್ದಾರೆ. ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಸರ್ಕಾರ ಘೋಷಿಸಿದೆ.


























