ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ

0
26

ಚಿತ್ರದುರ್ಗ: ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ನೀಡುವ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.
ಚಿತ್ರದುರ್ಗ ನಗರದ ಕೇಂದ್ರೀಯ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾದ “ಶಕ್ತಿ” ಯೋಜನೆಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.
ಇಂದು ಜಿಲ್ಲೆಯಲ್ಲಿ ಎಲ್ಲರೂ ಸಂಭ್ರಮಿಸುವ ದಿನವಾಗಿದೆ. ರಾಜ್ಯ ವಿಧಾನ ಸಭಾ ಚುನಾವಣೆ ಸಮಯದಲ್ಲಿ ನಮ್ಮ ಪಕ್ಷ ನೀಡಿದ ಭರವಸೆಗಳಲ್ಲಿ ಪೈಕಿ ಮೊದಲನೇ ಭರವಸೆಯನ್ನು ಸರ್ಕಾರ ರಚನೆಯಾದ ತಿಂಗಳ ಒಳಗಾಗಿ ಈಡೇರಿಸಲಾಗಿದೆ. ನಮ್ಮ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆ ಜಾರಿಗೊಳಿಸಿದ್ದು ನಮ್ಮೆಲ್ಲರಿಗೂ ಹೆಮ್ಮಯ ದಿನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ 2013ರಲ್ಲೂ ಅಧಿಕಾರಕ್ಕೆ ಬಂದಾಗ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಭರವಸೆಗಳನ್ನು ಈಡೇರಿಸಿತ್ತು. ಜನರ ಶ್ರೇಯೋಭಿವೃದ್ದಿಗಾಗಿ ಪ್ರಣಾಳಿಕೆಯಲ್ಲಿ ಇಲ್ಲದ ಯೋಜನೆಗಳನ್ನೂ ಕೂಡ ಜಾರಿಗೊಳಿಸಿತ್ತು. ಅದೇ ರೀತಿ ‘ಶಕ್ತಿ’ ಯೋಜನೆ ಜಾರಿ ಮಾಡಿ ಮಹಿಳಾ ಸಬಲೀಕರಣಕ್ಕೆ ಪೂರಕ ಅವಕಾಶ ನೀಡಲಾಗಿದೆ. ಇದರಿಂದ ರಾಜ್ಯದ ಎಲ್ಲಾ ಮಹಿಳೆಯರು ರಾಜ್ಯ ಮತ್ತು ಜಿಲ್ಲೆಯಲ್ಲಿ ಯಾವುದೇ ಪ್ರಯಾಣದ ಮಿತಿ ಇಲ್ಲದೆ ಉಚಿತವಾಗಿ ಓಡಾಡುವ ಅವಕಾಶ ಲಭಿಸಿದಂತಾಗಿದೆ. ಈ ಮೂಲಕ ಸರ್ಕಾರದ ಮೊದಲ ಗ್ಯಾರಂಟಿಯನ್ನು ನಾವು ಈಡೇರಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಮೆಡಿಕಲ್ ಕಾಲೇಜು ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳ ಜಾರಿಗೆ ಪ್ರಯತ್ನ ನಡೆಸುತ್ತೇನೆ, ಅಲ್ಲದೆ ಪ್ರಮುಖ ಸಮಸ್ಯೆಗಳನ್ನು ಈಡೇರಿಸಲು ಪ್ರಾಮಾಣಿಕ ಯತ್ನ ಮಾಡುತ್ತೇನೆ. ನಮ್ಮ ಸರ್ಕಾರ ನೀಡಿದ ಭರವಸೆಯಂತೆ ಜುಲೈ 1ರಿಂದ ಉಚಿತ ವಿದ್ಯುತ್, ಉಚಿತ ಅಕ್ಕಿ ಹಾಗೂ ಆ. 15ರಿಂದ ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿಗೆ 2000 ರೂ. ನೆರವು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸರ್ಕಾರಕ್ಕೆ ಆರ್ಥಿಕ ಹೊರೆಯಾದರೂ ಕೂಡ, ಅದನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ನಮ್ಮ ಸರ್ಕಾರ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಹೇಳಿದರು.
ಶಾಸಕ ಕೆ.ಸಿ.ವೀರೇಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆ ಕಾರ್ಯಕ್ರಮದ ಬಳಿಕ ಚಿತ್ರದುರ್ಗ-ಬೆಂಗಳೂರು ಬಸ್‍ನಲ್ಲಿ ತೆರಳುವ ಮಹಿಳಾ ಪ್ರಯಾಣಿಕರಿಗೆ ಸಚಿವ ಡಿ.ಸುಧಾಕರ್ ಉಚಿತ ಬಸ್ ಟಿಕೇಟ್ ನೀಡಿದರು. ಬಸ್ ಏರಿದ ಮಹಿಳೆಯರಿಗೆ ಹೂ ನೀಡುವ ಮೂಲಕ ಸ್ವಾಗತಿಸಲಾಯಿತು, ಅಲ್ಲದೆ ಸಿಹಿ ವಿತರಿಸಲಾಯಿತು.
ಚಿತ್ರದುರ್ಗ-ದಾವಣಗೆರೆ, ಚಿತ್ರದುರ್ಗ-ಹಿರಿಯೂರು, ಚಿತ್ರದುರ್ಗ-ಚಳ್ಳಕೆರೆ ಬಸ್‍ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಸಾರಿಗೆ ಸೇವೆಗೂ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಚಿತ್ರದುರ್ಗದ ಬಸ್ ನಿಲ್ದಾಣದಲ್ಲಿ ಭಾನುವಾರದಂದು ಸುಡುವ ಬಿಸಿಲಿನ ನಡುವೆಯೂ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಕಲ್ಪಿಸುವ “ಶಕ್ತಿ” ಯೋಜನೆ ಜಾರಿಗೊಳಿಸಿದ್ದು, ಮಹಿಳೆಯರಲ್ಲಿ ಸಂಭ್ರಮ ಇಮ್ಮಡಿಗೊಳಿಸಿತು. ಮಧ್ಯಾಹ್ನ 1 ಗಂಟೆಯಾಗುತ್ತಲೇ, ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದರಿಂದ ಮಹಿಳೆಯರು ಸಂತಸದಿಂದಲೇ ಬಸ್ ಸಂಚಾರಕ್ಕೆ ಮುಂದಾದರು. ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ ಬಗ್ಗೆ ಕಾರ್ಯಕ್ರಮ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸಿ ಸಂಭ್ರಮದಿಂದ ತಮ್ಮಿಷ್ಟದ ಊರುಗಳಿಗೆ ಪ್ರಯಾಣ ಬೆಳೆಸಿದರು.

Previous articleಟೀಕೆ ಮಾಡುವವರಿಗೆ ಸಿಎಂ ತಿರುಗೇಟು
Next articleಹುಬ್ಬಳ್ಳಿ-ಧಾರವಾಡದಲ್ಲಿ ಶಕ್ತಿ ಯೋಜನೆಗೆ ಚಾಲನೆ