ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಸ್ತೆ ಸಾರಿಗೆ ನೌಕರರು ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಸರ್ಕಾರವು ತಮ್ಮ ವೇತನ ಹೆಚ್ಚಳದ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿದೆ. ಇದರಿಂದಾಗಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲೂಕೆಆರ್‌ಟಿಸಿ, ಕೆಕೆಆರ್‌ಟಿಸಿ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನೌಕರರ ಸಮಸ್ಯೆಗಳ ಪರಿಹಾರಕ್ಕೆ ವಿವಿಧ ರೀತಿಯ ಹೋರಾಟ ನಡೆಸಿದ್ದರೂ ಸ್ಪಂದಿಸಿಲ್ಲ. ಮಾರ್ಚ್ 1 ರಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ, ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿಲ್ಲ. ಹೀಗಾಗಿ ಮಾರ್ಚ್ 24 ರಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.