ಬೆಂಗಳೂರು: ಸೆ. 7ರಂದು ‘ಭಾರತ್ ಜೋಡೊ ಯಾತ್ರೆʼಗೆ ಮೊದಲ ವಾರ್ಷಿಕೋತ್ಸವ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಾದಯಾತ್ರೆ ನಡೆಸಲು ರಾಮನಗರ ಜಿಲ್ಲೆಯನ್ನು ಆಯ್ಕೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು “ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಭಾರತ್ ಜೋಡೊ ಯಾತ್ರೆʼಗೆ ಒಂದು ವರ್ಷ ತುಂಬುತ್ತಿರುವ ಅಂಗವಾಗಿ ಇದೇ ಸೆ. 7ರಂದು ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಮಾಡುವ ಮೂಲಕ ಸಂಭ್ರಮಿಸಲಾಗುತ್ತಿದೆ.
ಸೆ.7ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಜೆ 5 ಗಂಟೆಯಿಂದ 6 ಗಂಟೆ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಜಿಲ್ಲೆಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ‘ಭಾರತ್ ಜೋಡೊ ಯಾತ್ರೆ’ಯ ಮೊದಲ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಮಾಡಬೇಕು. ಟ್ರಾಫಿಕ್ ಸಮಸ್ಯೆ ಕಾರಣಕ್ಕಾಗಿ ಬೆಂಗಳೂರಿನ ಸಾರ್ವಜನಿಕರ ಹಿತದೃಷ್ಟಿಯಿಂದಾಗಿ ಪಾದಯಾತ್ರೆ ನಡೆಸಲು ರಾಮನಗರ ಜಿಲ್ಲೆಯನ್ನು ಮುಖ್ಯಮಂತ್ರಿಗಳು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.