ಬೆಂಗಳೂರು: ಧಾರವಾಡ ಜಿಲ್ಲೆಯ ಪುಟ್ಟ ಬಾಲಕಿಯ ಪತ್ರ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಕರ್ನಾಟಕ ಸರ್ಕಾರದ ನೂತನ ಕಾರ್ಯಕ್ರಮವಾದ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೋಷಣ ಪೌಷ್ಠಿಕ ಆಹಾರದ(ಮೊಟ್ಟೆ, ಚಿಕ್ಕಿ, ಬಾಳೆಹಣ್ಣು) ವಿತರಣೆಯ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ಕರ್ನಾಟಕ ರಾಜ್ಯ ಸರಕಾರಕ್ಕೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಳಲಿ ಗ್ರಾಮದ ಶ್ರೀ ಜಗದ್ಗುರು ಪಕ್ಕಿರೇಶ್ವರ ಸರಕಾರಿ ಪ್ರೌಢ ಶಾಲೆಯ ಬಾಲಕಿ ಆಶಾ ನೆಹರು ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಾರ್ಥಕತೆ ವ್ಯಕ್ತಪಡಿಸಿದ್ದಾರೆ, ಅವರು ತಮ್ಮ ಟ್ವೀಟ್‌ನಲ್ಲಿ “ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ.
ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ” ಎಂದಿದ್ದಾರೆ.
