ಗಲಾಟೆಯಲ್ಲಿ ಇನ್‌ಸ್ಪೆಕ್ಟರ್ ಸೇರಿ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯ
ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಇನ್‌ಸ್ಪೆಕ್ಟರ್ ಸೇರಿ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು. ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಅವರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಗುಂಪು ಇದನ್ನು ಕೇಳಲು ಸಿದ್ಧರಿರಲಿಲ್ಲ. ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದೆ, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ರಾತ್ರಿಯಿಡೀ ಗಲಾಟೆ ನಡೆದಿದ್ದು, ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದೆ. ಆಕ್ರೋಶಿತರನ್ನು ತಡೆಯಲು ಪೊಲೀಸರ ಹರಸಾಹಸಪಟ್ಟಿದ್ದಾರೆ. ಸದ್ಯ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಕಲ್ಲೇಟಿನಿಂದ ಗಾಯವಾಗಿದೆ. ಕಲ್ಲೇಟಿನಿಂದ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 10 ಕ್ಕೂ ಪೊಲೀಸ್ ವಾಹನಗಳ ಮೇಲೆ ಕಲ್ಲೂ ತೂರಾಟ ನಡೆದಿದೆ.