ಬೆಂಗಳೂರು: ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ೫,೨೬೭ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.
೨೦೨೪-೨೫ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ೧೦೩ರಲ್ಲಿನ ಘೋಷಣೆಯಂತೆ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು ೬,೫೮೪ ಶಿಕ್ಷಕರ ಹುದ್ದೆಗಳ ಪೈಕಿ ಶೇ. ೮೦ ರಷ್ಟು ಅಂದರೆ ಒಟ್ಟು ೫೨೬೭ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು.