ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವಂತೆ ಆಗ್ರಹಿಸಿ ಶನಿವಾರ ರಾಜ್ಯ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ 10.30ಕ್ಕೆ ರಾಜಭವನ ಚಲೋ ಹೋರಾಟ ನಡೆಸಲಿದ್ದಾರೆ. ವಿಧಾನಸೌಧ ಆವರಣದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿಯಿಂದ ಸಚಿವರು, ಕಾಂಗ್ರೆಸ್ ಶಾಸಕರು, ಮೇಲ್ಮನೆ ಸದಸ್ಯರು ಹಾಗೂ ಸಂಸದರು ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ತೆರಳಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ವಿರುದ್ಧದ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸದ್ದಾರೆ.