ಕಾಂಗ್ರೆಸ್ ಸರ್ಕಾರ ಪತನದ ಭವಿಷ್ಯ ನುಡಿದ ಗೋವಿಂದ ಕಾರಜೋಳ

ಚಳ್ಳಕೆರೆ :ಚಿತ್ರದುರ್ಗ ಸಂಸದ ಮತ್ತು ಹಿರಿಯ ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಡಿಸೆಂಬರ್ ನಂತರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. “೨೦೨೮ಕ್ಕೆ ವಿಧಾನಸಭೆ ಚುನಾವಣೆ ಬರುತ್ತದೆ ಎಂದು ನಾನು ಹೇಳುವುದಿಲ್ಲ. ಖಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು,” ಎಂದು ಭವಿಷ್ಯ ನುಡಿದ ಅವರು, ಸುಮಾರು ೧೫೦ ಶಾಸಕರ ಬೆಂಬಲದೊAದಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಳ್ಳಕೆರೆ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ವತಿಯಿಂದ ನೂತನ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಅವರ ಅಭಿನಂದನಾ ಸಮಾರಂಭ ಮತ್ತು ಮಂಡಲ ಅಧ್ಯಕ್ಷ ಬಿ.ಎಂ. ಸುರೇಶ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ

ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದುರಾಡಳಿತ ನಡೆಸುತ್ತಿದೆ ಎಂದು ತೀವ್ರವಾಗಿ ಟೀಕಿಸಿದರು. “ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರಿಗೆ ಜನ ಶಾಪ ಹಾಕುತ್ತಿದ್ದಾರೆ,” ಎಂದು ಕಿಡಿಕಾರಿದರು. ಗ್ಯಾರಂಟಿ ಯೋಜನೆಗಳಿಂದ ಜನರು ಬೇಸತ್ತಿದ್ದು, ಬೆಲೆ ಏರಿಕೆ, ರೈತರ ಆತ್ಮಹತ್ಯೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ಅವರು ಆರೋಪಿಸಿದರು. ಇದಲ್ಲದೆ, Sಅ-Sಖಿ ನಿಗಮಗಳ ₹೩೪,೦೦೦ ಕೋಟಿ ಹಣವನ್ನು ಬಳ್ಳಾರಿ ಸೇರಿದಂತೆ ತೆಲಂಗಾಣ ಚುನಾವಣೆಗೆ ಬಳಸಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ “ಸಾಧನೆ” ಎಂದು ಕಾರಜೋಳ ವ್ಯಂಗ್ಯವಾಡಿದರು. ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ಬೆಲೆ ಏರಿಕೆಯಾಗಿದ್ದು, ಇದರಿಂದ ಮಹಿಳೆಯರಿಗೆ ಮನೆ ನಿರ್ವಹಣೆ ಕಷ್ಟಕರವಾಗಿದೆ ಎಂದೂ ಅವರು ಹೇಳಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ಮುಂಬರುವ ದಿನಗಳ ಕಾರ್ಯತಂತ್ರ
ಮುAದಿನ ದಿನಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದಾಗಲಿವೆ ಎಂದು ಕಾರಜೋಳ ಘೋಷಿಸಿದರು. ಎರಡೂ ಪಕ್ಷಗಳ ಕಾರ್ಯಕರ್ತರು “ಒಂದೇ ತಾಯಿಯ ಮಕ್ಕಳಿದ್ದಂತೆ” ಎಂದು ಬಣ್ಣಿಸಿದರು. ಟಿಕೆಟ್ ಹಂಚಿಕೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸಲಿದ್ದು, ಯಾರಿಗೆ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಅವರು ಕರೆ ನೀಡಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿಲ್ಲದಿದ್ದರೂ, ಕೇಂದ್ರದಲ್ಲಿ ಅಧಿಕಾರದಲ್ಲಿದೆ ಎಂಬುದನ್ನು ನೆನಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸಿ ಮತ ಕೇಳುವಂತೆ ಕಾರ್ಯಕರ್ತರಿಗೆ ಸೂಚಿಸಿದರು. ಭಾರತದ ಆರ್ಥಿಕ ಸ್ಥಿತಿ ಉತ್ತಮವಾಗಿದ್ದು, ಜಿಡಿಪಿ ದರದಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಎಂಬುದನ್ನು ಅವರು ಉಲ್ಲೇಖಿಸಿದರು.

“ಚಳ್ಳಕೆರೆಗೆ ಆನೆ ಬಲ” – ಗೋವಿಂದ ಕಾರಜೋಳ
ಕೆ.ಟಿ. ಕುಮಾರಸ್ವಾಮಿ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಚಳ್ಳಕೆರೆ ತಾಲೂಕಿನ ಕಾರ್ಯಕರ್ತರಿಗೆ “ಆನೆ ಬಲ” ಬಂದAತಾಗಿದೆ ಎಂದು ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದರು. ಶಾಸಕರ ಯಾವುದೇ ಬೆದರಿಕೆಗಳಿಗೆ ಬಗ್ಗದೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮತ್ತು ಜನರ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಚಳ್ಳಕೆರೆ ತಾಲೂಕಿನಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವಂತೆ ಅವರು ಕಿವಿಮಾತು ಹೇಳಿದರು.

ಬಿಜೆಪಿ ಶಿಸ್ತಿನ ಪಕ್ಷ – ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ
ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಮಾತನಾಡಿ, ಸ್ವಾತಂತ್ರ‍್ಯ ಬಂದಾಗಿನಿAದ ಯಾವುದೇ ಪಕ್ಷವು ೩೦-೪೦ ವರ್ಷಗಳಿಂದ ರಾಷ್ಟ್ರೀಯ ಅಧ್ಯಕ್ಷರನ್ನು ಬದಲಾವಣೆ ಮಾಡಿಲ್ಲ. ಆದರೆ ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಪ್ರತಿ ಮೂರು ವರ್ಷಗಳಿಗೊಮ್ಮೆ ರಾಷ್ಟ್ರದಿಂದ ಗ್ರಾಮೀಣ ಮಟ್ಟದವರೆಗೂ ಪಕ್ಷದ ಅಧ್ಯಕ್ಷರನ್ನು ಬದಲಾಯಿಸಿ ಹೊಸ ಮುಖಗಳಿಗೆ ಅವಕಾಶ ನೀಡುತ್ತದೆ ಎಂದು ಹೇಳಿದರು. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ೨೦-೨೦ ಸರ್ಕಾರದಂತಹ ಸನ್ನಿವೇಶಗಳಲ್ಲಿ ಅಧಿಕಾರ ನಡೆಸಿದ್ದು ಬೇಸರದ ಸಂಗತಿ ಎಂದರು. ಪಕ್ಷ ಅಧಿಕಾರಕ್ಕೆ ಬಂದಾಗ ಬೇರೆ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿದ್ದರಿAದ ಜಿಲ್ಲೆಯ ಸಮಸ್ಯೆಗಳು ಬಗೆಹರಿದಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಸಣ್ಣ ಸಮುದಾಯಗಳನ್ನು ಗುರುತಿಸಿ ಅರ್ಹತೆಗೆ ತಕ್ಕಂತೆ ಅಧಿಕಾರ ನೀಡಿದಾಗ ಎಲ್ಲಾ ಸಮುದಾಯಗಳು ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತವೆ ಎಂದು ಅವರು ತಿಳಿಸಿದರು. ಮುಂದಿನ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಅಧಿಕಾರಕ್ಕೆ ತರುವ ಗುರಿ ಹೊಂದಬೇಕು ಎಂದು ತಿಪ್ಪಾರೆಡ್ಡಿ ಹೇಳಿದರು.

ನೂತನ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಮಾತನಾಡಿ, ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನ ದೊರೆಯುವುದು ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿದಂತಾಗುತ್ತದೆ ಎಂದರು. ಬಿಜೆಪಿಯ ತತ್ವ ಸಿದ್ಧಾಂತಗಳನ್ನು ದೇಶದ ಜನತೆ ಮೆಚ್ಚಿರುವುದರಿಂದಲೇ ಕೇಂದ್ರದಲ್ಲಿ ಕಳೆದ ಮೂರು ಬಾರಿ ಅಧಿಕಾರ ಹಿಡಿದಿದೆ ಎಂದು ಅವರು ಪ್ರತಿಪಾದಿಸಿದರು. ಚಳ್ಳಕೆರೆ ಕ್ಷೇತ್ರದಲ್ಲಿ ಕಳೆದ ಮೂರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ಅವರು ಹೇಳಿದರು. ಶಾಸಕ ರಘುಮೂರ್ತಿ ಅವರ ಲೋಪದೋಷಗಳನ್ನು ಜನತೆಗೆ ಮನವರಿಕೆ ಮಾಡಿಕೊಡುವ ಮೂಲಕ ತಾಲೂಕಿನಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯರಾಗಬೇಕು ಎಂದು ಅವರು ಕರೆ ನೀಡಿದರು.

ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವ ಪತ್ರಕರ್ತರಿಗೆ ನಿವೇಶನ ನೀಡುವಲ್ಲಿ ಶಾಸಕರು ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬಡವರಿಗೆ ನಿವೇಶನಗಳನ್ನು ಹಂಚಲು ಮಾಜಿ ಶಾಸಕ ತಿಪ್ಪೇಸ್ವಾಮಿ ಮುಂದಾಗಿದ್ದರು, ಆದರೆ ಶಾಸಕ ರಘುಮೂರ್ತಿ ಅವರು ನಿರ್ಮಿಸಿದ್ದ ಮನೆಗಳು ಬಡವರಿಗೆ ಉಪಯೋಗವಾಗಿಲ್ಲ ಎಂದು ದೂರಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ನೂತನ ತಾಲೂಕು ಅಧ್ಯಕ್ಷ ಸುರೇಶ್ ಅವರಿಗೆ ಮಾಜಿ ಅಧ್ಯಕ್ಷ ಸೊರನಹಳ್ಳಿ ಶ್ರೀನಿವಾಸ್ ಅವರು ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಈ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎ. ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಾಳೆಕಾಯಿ ರಾಮದಾಸ್ ಮತ್ತು ಕಾಲವೇಹಳ್ಳಿ ಜಯಪಾಲಯ್ಯ, ಸೋಮಶೇಖರ್ ಮಂಡಿಮಠ, ಹನುಮಂತೇಗೌಡ, ಸುರನಹಳ್ಳಿ ಶ್ರೀನಿವಾಸ್ ಹಾಗೂ ನಿವೃತ್ತ ತಹಸೀಲ್ದಾರ್ ರಘುಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.