ರಾಯಚೂರು: ಸಿಇಟಿ ಪರೀಕ್ಷೆಗೆ ಹಾಜರಾದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಹಾಗೂ ಬೀದರ್ ನಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಸೂಚಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಘಟಕದ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು
ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬ್ರಾಹ್ಮಣ ಜನಾಂಗದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆ ಇದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಉನ್ನತ ಶಿಕ್ಷಣ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಬೇಕು, ತಕ್ಷಣ ಘಟನೆಗೆ ಕಾರಣರಾದ ಅಧಿಕಾರಿಗಳು ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಂದಿನ ದಿನಗಳಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು, ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಆಯೋಜಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ರಮೇಶ್ ಕುಲಕರ್ಣಿ ಸೇರಿದಂತೆ ಬ್ರಾಹ್ಮಣ ಸಮುದಾಯದ ಅನೇಕ ಮುಖಂಡರು ಪ್ರತಿಭಟನೆಯಲ್ಲಿದ್ದರು.
Home ತಾಜಾ ಸುದ್ದಿ ಜನಿವಾರ ತೆಗೆಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಟನೆ