ವಿವಿಧ ಸಂಘಟನೆಗಳಿಂದ ಮುಂದುವರಿದ ಪ್ರತಿಭಟನೆ
ಶಿವಮೊಗ್ಗ: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ತೆಗೆಸಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಇದೇ ವೇಳೆ ಶನಿವಾರವು ಕೂಡಾ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದವು.
ಘಟನೆ ಖಂಡಿಸಿ ಶುಕ್ರವಾರ ರಾತ್ರಿ ಬ್ರಾಹ್ಮಣ ಸಂಘಟನೆ ಇಲ್ಲಿನ ದೊಡ್ಡಪೇಟೆ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಬಳಿಕ ಪೊಲೀಸರು ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಈ ನಡುವೆ ಪ್ರಾಥಮಿಕ ಹಂತದಲ್ಲಿ ಕರ್ತವ್ಯ ಲೋಪ ಎಸಗಿರುವ ಗೃಹರಕ್ಷಕ ದಳದ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ತನಿಖೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಘಟನೆ ಖಂಡಿಸಿ ಪ್ರತಿಭಟನೆ:
ಇನ್ನು ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಶನಿವಾರ ಕೂಡಾ ಕೆಲ ಸಂಘಟನೆಗಳು ಶಿವಮೊಗ್ಗದಲ್ಲಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಷ್ಟçಭಕ್ತರ ಬಳಗ ಹಾಗೂ ಕರವೇ ಸಂಘಟನೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದವು.