ಹುಬ್ಬಳ್ಳಿ: ಜಾತಿಗಣತಿ ಕುರಿತು ಚರ್ಚೆಗಳು ನಡೆದಿವೆ. ಸಚಿವ ಸಂಪುಟದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆಯೇ ಹೊರತು, ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿಲ್ಲ ಎಂದು ವೈದ್ಯಕೀಯ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಶರಣುಪ್ರಕಾಶ ಪಾಟೀಲ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಅಭಿಪ್ರಾಯ ಹಂಚಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.
‘ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಲಿದ್ದಾರೆ. ಪರೀಕ್ಷೆಗೆ ಹಾಜರಾಗಲು ನಿರಾಕರಿಸಿದ ವಿದ್ಯಾರ್ಥಿಗೆ ಯಾವ ರೀತಿಯಲ್ಲಿ ನ್ಯಾಯ ಕೊಡಬೇಕೆಂದು ತೀರ್ಮಾನಿಸಲಾಗುವುದು’ ಎಂದು ಹೇಳಿದರು.
‘ವಿದೇಶದಲ್ಲಿ ರಾಹುಲ್ ಗಾಂಧಿ ಅವರು ಭಾರತದ ಬಗ್ಗೆ ಅವಹೇಳನಕಾರಿಯಾಗಿ ಏನೂ ಮಾತನಾಡಿಲ್ಲ. ಕೆಲವು ವ್ಯವಸ್ಥೆಯ ವಿರುದ್ಧ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಸಾಕಷ್ಟು ಬಾರಿ ವಿದೇಶದಲ್ಲಿ ವ್ಯವಸ್ಥೆ ಕುರಿತು ಮಾತನಾಡಿದ್ದಾರಲ್ಲ’ ಎಂದು ಸಚಿವರು ಸಮರ್ಥಿಸಿಕೊಂಡರು