ಹುಬ್ಬಳ್ಳಿ: ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ. ಸಿಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ. ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ. ಆದರೆ, ಹೆಬ್ಬಾಳಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಓಡಿಗೆ ಹಸ್ತಾಂತರ ಮಾಡಲಾಗಿದೆ ಎಂದರು.
ಹಳೆಹುಬ್ಬಳ್ಳಿಯ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆಪಾದನೆ ಇದೆ. ಈ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದಕೊಳ್ಳುತ್ತೇನೆ. ಮಾಹಿತಿ ಪಡೆದು ಪೊಲೀಸ್ ಇನ್ಸ್ಪೆಕ್ಟರ್ ತಪ್ಪು ಎಸಗಿದ್ದರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳುವೆ ಎಂದರು.
ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ ಲೇವಡಿಗೆ ತಿರುಗೇಟು ನೀಡಿದ ಪರಮೇಶ್ವರ್, ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ವ್ಯಂಗ್ಯವಾಡಿದರು.
























