ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ದಿಢೀರನೆ ಸೋಮವಾರ ಸಂಜೆ ದೆಹಲಿಗೆ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಯಲಿದೆ. ಡಿಕೆಶಿ ದೆಹಲಿ ಭೇಟಿ ವೇಳೆ ಮತ್ತೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗುಲ್ಲೆದ್ದಿದ್ದು ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮುನಿಸಿದ್ದರೂ ಹೈಕಮಾಂಡ್ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದ ಮೇಲ್ಮನೆ ಸದಸ್ಯ ಬಿ.ಕೆ.ಹರಿಪ್ರಸಾದ್ ಕ್ಯಾಬಿನೆಟ್ ಸೇರ್ಪಡೆ ಬಗ್ಗೆಯೂ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.