ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಮಂಡ್ಯ ರಕ್ಷಣಾ ವೇಧಿಕೆ ಕಾರ್ಯಕರ್ತರು ಹೆದ್ದಾರಿಯಲ್ಲಿ ಖಾಲಿಕೊಡ, ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸಿದರು.
ವೇಧಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಪಟ್ಟಣದ ಕುವೆಂಪು ವೃತ್ತದ ಬಳಿಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಲಾಯಿತು.
ಜನತೆಗೆ ಕುಡಿಯಲು ಸಹ ನೀರಿಲ್ಲದ ಇಂತಹ ಬರಗಾಲದ ಸಂದರ್ಭದಲ್ಲೂ ಕಾಂಗ್ರೆಸ್ ಸರ್ಕಾರ ರಾಜಾ ರೋಷವಾಗಿ ತಮಿಳುನಾಡಿಗೆ ನೀರು ಹರಿಸುವ ಮೂಲಕ ಜನತೆಗೆ ವಿಷವುಣಿಸಲು ಮುಂದಾಗಿದೆ ಎಂದು ಅಣಕು ವಿಷದ ಬಾಟಲಿ ಹಿಡಿದು ಪ್ರತಿಭಟಿಸಿದರು.
ತಕ್ಷಣವೇ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಜನ – ಜಾನುವಾರುಗಳ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು..