ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಾಟೆ ವಿಚಾರವಾಗಿ ಸರ್ಕಾರ ಯಾವುದೇ ದ್ವೇಷ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದರು.
ಮುನಿರತ್ನ ವಿರುದ್ಧ ಮಹಿಳೆಯರು ದೂರು ಕೊಟ್ಟ ವಿಚಾರವಾಗಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಇದರ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಕಾನೂನುಬಾಹಿರ ಕೆಲಸ ಮಾಡಿದ್ದರೆ, ಏನು ಕ್ರಮ ಆಗಬೇಕು ಅದು ಆಗುತ್ತದೆ ಎಂದರು.