Home News ಪರಭಾಷೆ ನಟಿಯನ್ನು ರಾಯಭಾರಿ ಮಾಡಿದ್ದೇಕೆ?

ಪರಭಾಷೆ ನಟಿಯನ್ನು ರಾಯಭಾರಿ ಮಾಡಿದ್ದೇಕೆ?

ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ 1916ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು. ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು. ಇಂಥ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಅದು ಸಾಲದೆಂಬಂತೆ ಆರು ಕೋಟಿ ರೂ.ಗಳಿಗೂ ಹೆಚ್ಚು ರೂಪಾಯಿ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ.

ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂಬುದು ಸರ್ಕಾರದ ನಿರ್ಧಾರವಾಗಿದ್ದರೆ ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಾಗಿತ್ತು. ತಮನ್ನಾ ಭಾಟಿಯಾ ಅವರಿಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ.

ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಸಾವಿರಾರು ಕೋಟಿ ರೂ. ಜನರಿಗೆ ನೀಡದೇ ಮಾತು ತಪ್ಪಿರುವ ಕಾಂಗ್ರೆಸ್ ಸರ್ಕಾರ, ಈಗ ಪರಭಾಷೆ ನಟಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು ಹಾಗೂ ರಾಜ್ಯ ಸರ್ಕಾರ ಈ ಕೂಡಲೇ ಈ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ಕನ್ನಡಿಗರ 6.20 ಕೋಟಿ ರೂಪಾಯಿಯನ್ನು ಉಳಿಸಲಿ ಎಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದಿದ್ದಾರೆ.

Exit mobile version