ಬೆಂಗಳೂರು: ಪಿಎಸ್ಐ ಲಿಖಿತ ಪರೀಕ್ಷೆಯನ್ನು ಮುಂದೂಡುವಂತೆ ಮಾಜಿ ಸಚಿವ, ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತ್ರತ್ವದ ನಿಯೋಗ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತಂತೆ ಅಶ್ವತ್ಥನಾರಾಯಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಪಿಎಸ್ಐ ಲಿಖಿತ ಪರೀಕ್ಷೆಯು ಸೆಪ್ಟೆಂಬರ್ 22ರಂದು ನಿಗದಿಯಾಗಿತ್ತು. ಇದೇ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆ ಇರುವುದರಿಂದ ಹಲವು ಪರೀಕ್ಷಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ. ಇದನ್ನು ಪರಿಗಣಿಸಿ ಮಾನ್ಯ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಮುಂದೂಡುವಂತೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಧೀರಜ್ ಮುನಿರಾಜು ಹಾಗೂ ಬಿಜೆಪಿ ನಿಯೋಗದೊಂದಿಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೋರುತ್ತೇನೆ ಎಂದಿದ್ದಾರೆ.