ಪ್ರಧಾನಿಗೆ ಐದು ಬೇಡಿಕೆಗಳ ಮನವಿ

0
8

ನವದೆಹಲಿ: ಪ್ರಧಾನಿ ಅವರಿಗೆ ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಿಸಿ ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿರುವ ಅವರು ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ-ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ. ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಿಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ.
ಪ್ರಧಾನಿಗಳ ಭೇಟಿ ವೇಳೆ ಚರ್ಚಿಸಲ್ಪಟ್ಟ ಪ್ರಮುಖ 5 ವಿಷಯಗಳು:
ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಮನವಿಯನ್ನು ಮಾಡಿದ್ದೇವೆ. ಈ ವರೆಗೆ ಮನವಿ ಈಡೇರಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ. ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ. ಬೇರೆ ಅಡೆ ತಡೆ ಏನೂ ಇಲ್ಲ. ಪರಿಸರ ತೀರುವಳಿ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಕ್ಲಿಯರೆನ್ ಕೊಡಿಸುವಂತೆ ಒತ್ತಾಯಿಸಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ರೂ.5,300 ಕೋಟಿ ಘೋಷಿಸಿದ್ದರು‌. ಕೇಂದ್ರ ಸರ್ಕಾರದ ಘೋಷಣೆ ಆಧಾರದಲ್ಲಿ ಹಿಂದಿನ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಕೂಡ ರೂ.5,300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್‌ಮೆಂಟ್. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ. ಮೇಕೆದಾಟು, ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಇದರಿಂದ ತಮಿಳುನಾಡಿಗೇ ಹೆಚ್ಚು ಅನುಕೂಲ. ನಮಗೆ ಕುಡಿಯುವ ನೀರಿನ ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ. ವಿದ್ಯುತ್ ಉತ್ಪಾದನೆ ಬಳಿಕ ಈ ನೀರು ಕೂಡ ತಮಿಳುನಾಡಿಗೇ ಹೋಗುತ್ತದೆ. ಇದರಿಂದಲೂ ಅವರಿಗೇ ಅನುಕೂಲ.
ಮೇಕೆದಾಟು ಆದರೆ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗುತ್ತದೆ. ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು, ಒತ್ತಾಯಿಸಿದ್ದೇವೆ ಎಂದಿದ್ದಾರೆ.

Previous articleಕೊರೊನಾ: ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ
Next articleಮಣ್ಣು ಕುಸಿದು-ಕಾರ್ಮಿಕನ ಸಾವು