ಪ್ರಸಿದ್ಧ ಕಾದಂಬರಿಕಾರ ನಾ. ಡಿಸೋಜ ಇನ್ನಿಲ್ಲ

0
17

ಮಂಗಳೂರು: ಪ್ರಸಿದ್ಧ ಕಾದಂಬರಿಕಾರ ಮತ್ತು ಪ್ರಕೃತಿ ಕಾಳಜಿಯ ಮನವುಳ್ಳ ಬರೆಹಗಾರ ನಾರ್ಬರ್ಟ್ ಡಿಸೋಜ ಇಂದು ನಿಧನರಾದರು.
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು ಜನಿಸಿದ್ದ ನಾರ್ಬರ್ಟ್ ಡಿಸೋಜ ಅವರು ಲೋಕೋಪಯೋಗಿ ಇಲಾಖೆಯಲ್ಲಿ ವೃತ್ತಿಜೀವನ ಪ್ರಾರಂಭಿಸಿ ಶರಾವತಿ ಯೋಜನೆ, ಕಾರ್ಗಲ್, ಮಾಸ್ತಿಕಟ್ಟೆ, ತೀರ್ಥಹಳ್ಳಿ, ಸಾಗರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು.
75 ಕಾದಂಬರಿಗಳು, 6 ಚಾರಿತ್ರಿಕ ಕಾದಂಬರಿ, ಮಕ್ಕಳಿಗಾಗಿ 25 ಕಾದಂಬರಿ, 9 ಕಥಾ ಸಂಕಲನ, ಸಮಗ್ರ ಕಥೆಗಳ ಎರಡು ಸಂಪುಟಗಳು, ಸುಮಾರು 500 ಕಥೆಗಳು, ಹತ್ತಾರು ನಾಟಕಗಳು, ರೇಡಿಯೋ ನಾಟಕಗಳು, ಅನೇಕ ಪತ್ರಿಕಾ ಲೇಖನಗಳು ಬರೆದಿದ್ದಾರೆ. ಇವರ ‘ಮುಳುಗಡೆಯ ಊರಿಗೆ ಬಂದವರು’ ಎಂಬ ಮಕ್ಕಳ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ‘ಬಾಲ ಸಾಹಿತ್ಯ ಪುರಸ್ಕಾರ’ ಸಂದಿದೆ. ‘ದ್ವೀಪ’ ಮತ್ತು ‘ಕಾಡಿನ ಬೆಂಕಿ’ ಕಾದಂಬರಿಗಳು ಚಲನಚಿತ್ರಗಳಾಗಿ ರಾಷ್ಟ್ರಿಯ ಪ್ರಶಸ್ತಿಯನ್ನು ಗಳಿಸಿವೆ.
ನಾ. ಡಿಸೋಜ ಅವರು ಬರವಣಿಗೆಯಲ್ಲಿ ಮಾತ್ರವಲ್ಲದೆ ಪರಿಸರಕ್ಕಾಗಿನ ಹೋರಾಟದಲ್ಲೂ ಪಾತ್ರವಹಿಸಿದ್ದಾರೆ. 2014 ವರ್ಷದಲ್ಲಿ ಮಡಿಕೇರಿಯಲ್ಲಿ ನೆಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ಕುವೆಂಪು ವಿಶ್ವವಿದ್ಯಾಲಯದ ಗೌರವಾನ್ವಿತ ಡಾಕ್ಟರೇಟ್ ಸೇರಿದಂತೆ ಅನೇಕ ಗೌರವಗಳು ಸಂದಿವೆ.

Previous articleರಾಜ್ಯದಲ್ಲಿ ಶೇ. ೬೦ ತಲುಪಿದ ಲಂಚದ ಪ್ರಮಾಣ
Next articleಕೋಲಾರ: ಕ್ಲಾಕ್‌ಟವರ್‌ ಬಳಿ ಆರ್‌ಎಸ್‌ಎಸ್ ಪಥಸಂಚಲನ