ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಲಮಾಣಿ ಶಿಫ್ಟ್

ಬೆಂಗಳೂರು: ಅಪಘಾತದಲ್ಲಿ ತೀವ್ರ ಗಾಯಗೊಂಡು ದಾವಣಗೆರೆಯ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರನ್ನು ಹಠಾತ್ ನಡೆದ ಬೆಳವಣಿಗೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಆರೋಗ್ಯ ಸಮಸ್ಯೆಯ ಕುರಿತು ವೈದ್ಯರು ಹಾಗೂ ಕುಟುಂಬ ಸದಸ್ಯರು ಮಾತ್ರ ಯಾವುದೇ ಮಾಹಿತಿ ಬಿಟ್ಟು ಕೊಡುತ್ತಿಲ್ಲ. ರುದ್ರಪ್ಪ ಲಮಾಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ದಾವಣಗೆರೆ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ವೈದ್ಯರು ಕೂಡ ಯಾವುದೇ ತೊಂದರೆ ಇಲ್ಲ. ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದರು. ಆದರೆ, ಇದೀಗ ಇದ್ದಕ್ಕಿದ್ದಂತೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಶುಕ್ರವಾರ ಬೆಂಗಳೂರಿನಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಹಿರಿಯೂರು ತಾಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಳನೀರು ಕುಡಿಯಲು ಕಾರಿನಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ ಹೊಡೆದು ತಲೆ, ಮಂಡಿ, ಮತ್ತು ಬಾಯಿಗೆ ಗಾಯಗಳಾಗಿದ್ದವು. ತಕ್ಷಣಕ್ಕೆ ಅವರಿಗೆ ಹಿರಿಯೂರಲ್ಲಿ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ ರಾತ್ರಿ ದಾವಣಗೆರೆಯ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.