ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ, ನೋಂದಣಿ ಅವಧಿ ವಿಸ್ತರಣೆ

ದಾವಣಗೆರೆ: ಭತ್ತ ಖರೀದಿ ಆರಂಭ ಮಾಡಿ ನೋಂದಣಿ ಮಾಡಲು ಮೇ ತಿಂಗಳ ಅಂತ್ಯದವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ರೈತ ಮುಖಂಡ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರಿಂದ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೊಂದಣಿ ಅವಧಿಯನ್ನು ಮೇ 31ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಕ್ವಿಂಟಾಲ್ ಭತ್ತಕ್ಕೆ ಎ.ಗ್ರೇಡ್ ರೂ. 2320, ಸಾಮಾನ್ಯ ಭತ್ತ ರೂ. 2300 ಗಳ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಜಗಳೂರು ಹೊರತುಪಡಿಸಿ ಎಲ್ಲಾ ಎಪಿಎಂಸಿಗಳಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ರೈತರಿಂದ 25 ಕ್ವಿಂಟಲ್‍ನಿಂದ ಗರಿಷ್ಠ 50 ಕ್ವಿಂಟಲ್‍ವರೆಗೆ ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಪ್ರತಿಭಟನೆ:
ಮೇ ಅಂತ್ಯದವರೆಗೆ ಖರೀದಿ ಕೇಂದ್ರ ಆರಂಭಿಸಿ ಎಂದು ಒತ್ತಾಯಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ರೈತ ಮುಖಂಡರ ಮನವೊಲಿಸಿ ಕಚೇರಿಯ ಸಭಾಂಗಣದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ರೈತರ ಸಮಕ್ಷಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತೆ ಜೋತ್ಸಹ್ನ, ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಆಪ್ತ ಕಾರ್ಯದರ್ಶಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ಆಪ್ತ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ರೈತರ ಸಮಸ್ಯೆ ಕುರಿತು ವಿವರಿಸಿದರು.
ಅಲ್ಲದೇ, ದಾವಣಗೆರೆ ಜಿಲ್ಲೆಯಲ್ಲಿ ಭತ್ತದ ಕೊಯ್ಲು ಪ್ರಾರಂಭವಾಗಿದೆ. ಭತ್ತದ ಧಾರಣೆಯಲ್ಲಿ ಇಳಿಮುಖವಾಗಿದೆ. ದರ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಬೀದಿಯಲ್ಲಿ ಭತ್ತ ಸುರಿದು ಪ್ರತಿಭಟನೆ ಮಾಡುತ್ತಿದ್ದಾರೆ. ನನ್ನ ಕಚೇರಿ ಮುಂದೆ ಧರಣಿ ನಡೆಸಿ ಘೇರಾವ್ ಮಾಡುತ್ತಿದ್ದಾರೆ. ಆದ್ದರಿಂದ ಭತ್ತ ಖರೀದಿಗಾಗಿ ನೋಂದಣಿಗೆ ಇದ್ದ ಕೊನೆ ದಿನಾಂಕ ಮೇ ೨೫ನ್ನು ವಿಸ್ತರಣೆ ಮಾಡುವ ಕುರಿತು ಪ್ರಸ್ತಾಪ ಮಾಡಿದರು.