ಬೆಂಗಳೂರು: ತನ್ನ ಕೆಟ್ಟ ಆಡಳಿತ, ಆರ್ಥಿಕ ಸವಾಲುಗಳನ್ನು ನಿರ್ವಹಿಸುವಲ್ಲಿ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಲೇ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ವಿರೋಧ ಪಕ್ಷ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಯತ್ನ ನಡೆಸಿದರು.
ಧರಣಿ ನಡೆಯುತ್ತಿರುವ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿಯೇ ಬ್ಯಾರಿಕೇಡ್ ಗಳನ್ನು ಹಾಕಿದ ಪೊಲೀಸರು ಕಾರ್ಯಕರ್ತರನ್ನು ತಡೆದರು. ಆದರೆ ಬ್ಯಾರಿಕೇಡ್ ದಾಟಿ ಮುಂದೆ ಹೋಗಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆಯಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ರಾಜ್ಯಾದ್ಯಂತ ಹೋರಾಟ ನಡೆಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಜನಾಕ್ರೋಶದ ಬಿಸಿ ಮುಟ್ಟಿಸುವ ಜನಾಂದೋಲನವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಈ ಜನವಿರೋಧಿ ಸರ್ಕಾರ ನಮ್ಮನ್ನು ಬಂಧಿಸಿದೆ. ಆದರೆ ರಾಜ್ಯ ಸರ್ಕಾರ ಬೆಲೆ ಏರಿಕೆಯ ನಿರ್ಣಯಗಳನ್ನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.