ಬೆಳಗಾವಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ, ಇಂತಹ ಘಟನೆಗಳಿಗೆ ದೇಶ ಒಟ್ಟಾಗಿ ಪ್ರತಿಕ್ರಿಯಿಸಬೇಕು. ಕೇಂದ್ರ ಸರಕಾರ ಕೈಗೊಳ್ಳುವ ನಿರ್ಧಾರಕ್ಕೆ ನಾವು ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹ ಕೇಂದ್ರದ ಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ದೇಶದ ಹಿತ ನಮ್ಮ ಮೊದಲ ಆದ್ಯತೆ. ಪಾಕಿಸ್ತಾನದ ಪ್ರಚೋದನೆ ಖಂಡನೀಯ ಎಂದರು.
ಇಂತಹ ಭಯೋತ್ಪಾದಕ ದಾಳಿಗಳನ್ನು ಎಲ್ಲರೂ ಖಂಡಿಸಬೇಕು. ಕೇಂದ್ರ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ. ಯುದ್ಧ ಬೇಡವೆಂಬ ಮುಖ್ಯಮಂತ್ರಿಗಳ ಹೇಳಿಕೆಗೆ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದು ಮುನಿಯಪ್ಪ ಸ್ಪಷ್ಟಪಡಿಸಿದರು.