ಕಲಬುರಗಿ: ಪಂಚಾಯತಿಯಿಂದ ಪಾರ್ಲಿಮೆಂಟ್ ವರೆಗೂ ಹೆಣ್ಣು ಮಕ್ಕಳಿಗೆ ಮೀಸಲಾತಿ ಕಲ್ಪಿಸಿದೆ. ಮುಂದಿನ ದಿನದಲ್ಲಿ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಸಿಗುವುದು ಶತಸಿದ್ಧ, ಅಧಿಕಾರ ಚಲಾಯಿಸಲು ನೀವು ಸಿದ್ಧರಾಗಿ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮಹಿಳೆಯರಿಗೆ ಕರೆ ನೀಡಿದರು.
ಶನಿವಾರ ನಗರದ ಪಿ.ಡಿ.ಎ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಹಿಳೆಯರ ಉನ್ನತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಹೆಣ್ಣನ್ನು ತಾಯಿಗೆ ಮತ್ತು ಭೂಮಿ ತಾಯಿಗೆ ಹೋಲಿಸಿ ಗೌರವ ನೀಡುವ ಸಂಸ್ಕೃತಿ ನಮ್ಮದಾಗಿದೆ. ಹೆಣ್ಣು ಬೆಳೆದರೆ ಸಮಾಜ ಬೆಳೆಯುತ್ತದೆ ಎಂಬ ನಂಬಿಕೆಯಿಂದಲೆ ಮಹಿಳಾ ಕೇಂದ್ರಿತವಾಗಿ ಆರ್ಥಿಕ ಶಕ್ತಿ ತುಂಬುವ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದ ಅವರು, ಹೆಣ್ಣು ಬೆಳೆದರೆ ಒಂದು ಕುಟುಂಬ ಬೆಳೆದಂತೆ ಎಂದರು.
ಶಾಸಕ ಅಲ್ಲಮಪ್ರಭು ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಇತರರಿದ್ದರು.