ಶೃಂಗೇರಿ: ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವರಾಗಿದ್ದ ಬೇಗಾನೆ ರಾಮಯ್ಯ ಗುರುವಾರ ನಿಧನರಾಗಿದ್ದಾರೆ.
ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ತಂದೆಯಾದ ಬೇಗಾನೆ ರಾಮಯ್ಯ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯಾಹ್ನ ೧:೪೫ಕ್ಕೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
೧೯೭೮ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಬೇಗಾನೆ ರಾಮಯ್ಯ ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು, ೧೯೭೨ರಲ್ಲಿ ನ.ರಾ.ಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ್ದರು.
ಶೃಂಗೇರಿ ಕ್ಷೇತ್ರದ ಶಾಸಕರಾಗಿ ಗ್ರಾಮೀಣ ಅಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ ರಾಮಯ್ಯ ಶೃಂಗೇರಿ ಕ್ಷೇತ್ರ ಕಂಡ ಅಪರೂಪದ ರಾಜಕಾರಣಿ. ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.