ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಗುರುವಾರ ನಡೆಯಿತು. ಕೊನೆಯಲ್ಲಿ, ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿಪಡಿಸಿದೆ.
ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯೂ ಸೇರಿದಂತೆ ಭೂ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿ ಹಾಗೂ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠವು ಗುರುವಾರ ನಡೆಸಿತು. ರಾಜ್ಯಪಾಲರು ಸೇರಿ ಎಲ್ಲಾ ಪ್ರತಿವಾದಿಗಳಿಗೆ ಈ ಪ್ರಕರಣಗಳಲ್ಲಿ ನೋಟಿಸ್ ಜಾರಿ ಮಾಡಲಾಯಿತು.