ರಾಜ್ಯಾದ್ಯಂತ 100 ಕಾಂಗ್ರೆಸ್ ಭವನ ನಿರ್ಮಿಸಲು ಕ್ರಮ

ರಾಮನಗರ: ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದ ಆಂಜನೇಯಸ್ವಾಮಿ ಆರ್ಚ್ ಮುಂಭಾಗದ ಸ್ಥಳದಲ್ಲಿ ಮಹಾತ್ಮ ಗಾಂಧಿರವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ 100 ವರ್ಷಗಳ ಸವಿ ನೆನಪಿನಾರ್ಥ ಆಯೋಜಿಸಲಾಗಿದ್ದ ರಾಮನಗರ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ, ಯುವ ಪರ್ವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಈ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರಾದ ರಾಹುಲ್‌ಗಾಂಧಿ ಅವರನ್ನು ಆಹ್ವಾನಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಆನ್‌ಲೈನ್ ಮೂಲಕ 100 ಸ್ಥಳದಲ್ಲಿ ನಿರ್ಮಿಣವಾಗಲಿರುವ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು. ಈ ವೇಳೆ ರಾಹುಲ್‌ಗಾಂಧಿ ಅವರು ಕಾರ್ಯಕರ್ತರ ಜತೆಗೂ ಚರ್ಚೆ ನಡೆಸಲಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ತುಂಬಲಿದೆ. ಹಾಗಾಗಿ ವಿಜಯನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ. ಈ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚಿಸಲಾಗುತ್ತಿದೆ. ಯುದ್ಧ ನಡೆಯುತ್ತಿರುವ ಕಾರಣ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ರಾಮನಗರ ಜಿಲ್ಲೆಯ ಜನ ಉದ್ಯೋಗಕ್ಕೆಂದು ಬೆಂಗಳೂರಿಗೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಿ ಜಿಲ್ಲೆಯಲ್ಲಿಯೇ ಉದ್ಯೋಗ ಸೃಷ್ಟಿಸುವ ಸಲುವಾಗಿ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕಾರಣ ಮಾಡಲಾಗುತ್ತಿದೆಯೆಂದು ಪುನರುಚ್ಛರಿಸಿದರು.