ರಾಜ್ಯ ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ಕೊಲೆ: ಪತ್ನಿ ಮೇಲೆ ಶಂಕೆ

ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದ್ದು, ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್‌ನ ಮನೆಯಲ್ಲಿ ರಕ್ತದ ಮಡುವಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ದೇಹದ ಮೂರು ಕಡೆಗಳಲ್ಲಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸದ್ಯ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.
ಘಟನೆ ಕುರಿತಂತೆ ಓಂ ಪ್ರಕಾಶ್ ಪತ್ನಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ, ಕೌಟುಂಬಿಕ ಕಲಹ ಹಿನ್ನೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಓಂ ಪ್ರಕಾಶ್​ ಅವರನ್ನ ಹೆಂಡತಿಯೇ ಬರ್ಬರವಾಗಿ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕರ್ನಾಟಕದ ಕೇಡರ್ 1981ರ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದ ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ ಡಿಜಿ, ಐಜಿಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರು ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ವಾಸವಾಗಿದ್ದರು.