ಹುಬ್ಬಳ್ಳಿ: ಮಹದಾಯಿ ಮತ್ತು ಕೃಷ್ಣಾ ನದಿ ಯೋಜನೆ ಸಮರ್ಪಕ ಜಾರಿ, ಎಂಎಸ್‌ಪಿ ಸಮರ್ಥ ಅನುಷ್ಠಾನ, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಆ. ೧೫ರಂದು ವಿವಿಧ ರೈತ ಸಂಘಟನೆಗಳಿಂದ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಟ್ರ‍್ಯಾಕ್ಟರ್ ರ‍್ಯಾಲಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯತರ) ಸಂಘಟನೆಯ ಹೋರಾಟ ಬೆಂಬಲಿಸಿ ಟ್ರ್ಯಾಕ್ಟರ್ ರ‍್ಯಾಲಿ ನಡೆಯಲಿದೆ. ಅಂದು ಎಲ್ಲ ರೈತರು ಒಗ್ಗಟ್ಟಾಗಿ ಆಯಾ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಎದುರು ಬೃಹತ್ ರ‍್ಯಾಲಿ ನಡೆಸಿ, ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಿದ್ದಾರೆ ಎಂದು ತಿಳಿಸಿದರು.