ಭೂಕುಸಿತಕ್ಕೆ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ವಯನಾಡ್ ಜಿಲ್ಲೆಯ ಮೆಪ್ಪಾಡಿ, ಮುಂಡಕೈ ಮತ್ತು ಚೋರಲ್ ಮಲದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಸಂಭವಿಸಿರುವ ಭೂಕುಸಿತಕ್ಕೆ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಒಂದು ಮಗುವೂ ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿರುವುದನ್ನು ಜಿಲ್ಲಾಡಳಿತ ದೃಢಪಡಿಸಿದ್ದು, ಒಟ್ಟಾರೆ 50ಕ್ಕೂ ಹೆಚ್ಚು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಗಣ್ಯರ ಸಂತಾಪ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಭೂಕುಸಿತದಿಂದ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಪ್ರಾಕೃತಿಕ ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಭರವಸೆ ನೀಡಿದ್ದಾರೆ.
ಪರಿಹಾರ ಘೋಷಿಸಿದ ಕೇಂದ್ರ : ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಕಾರ್ಯಾಲಯ ಘೋಷಿಸಿದೆ.