ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಅತ್ಯಾಚಾರ, ಮಹಿಳೆಯನ್ನು ವಿವಸ್ತ್ರಗೊಳಿಸಿ ಸಹಚರರಿಂದ ಆತ್ಯಾಚಾರ ಮಾಡಿಸಿರುವ ಹಾಗೂ ವೈರಸ್ ತಗುಲುವ ಚುಚ್ಚುಮದ್ದು ನೀಡಿರುವ ಪ್ರಕರಣವನ್ನು ಬೆಂಗಳೂರಿನ ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸ್‌ರು ಎಸ್‌ಐಟಿಗೆ ಹಸ್ತಾಂತರಿಸಿದ್ದಾರೆ.ಮುನಿರತ್ನ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ಸಮಗ್ರ ತನಿಖೆಗಾಗಿ ಕಳೆದ ವರ್ಷ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿತ್ತು. ಮುನಿರತ್ನ ವಿರುದ್ಧ ಕಗ್ಗಲಿಪುರ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ, ವೈಯಾಲಿಕಾವಲ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಗಳು ಎಸ್‌ಐಟಿಗೆ ವರ್ಗಾಯಿಸಲಾಗಿತ್ತು. ಇದೀಗ, ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ದಾಖಲಾಗಿದ್ದ ಆತ್ಯಾಚಾರ ಪ್ರಕರಣವನ್ನೂ ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ. ಈ ಸಂಬಂಧ ಪ್ರಕರಣದ ಕಡತಗಳನ್ನು ವರ್ಗಾಯಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.