ಸಿಎಂ ಸ್ಥಾನಕ್ಕೆ ಮೊದಲಿಂದಲೂ ಗುದ್ದಾಟ

0
14

ಹುಬ್ಬಳ್ಳಿ: ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ ಮೊದಲಿನಿಂದಲೂ ಗುದ್ದಾಟ ಇದ್ದೇ ಇದೆ. ಈಗಲೂ ಅದು ಮುಂದುವರೆದಿದ್ದು‌, ಆಡಳಿತ ಯಂತ್ರದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅಭಿಪ್ರಾಯ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಪದವಿ ಕಿತ್ತಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ಏನನ್ನೂ ಹೇಳುತ್ತಿಲ್ಲ.
ಐದು ವರ್ಷಗಳ ವರೆಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ ಎಂಬ ಸ್ಪಷ್ಟ ನಿರ್ದೇಶನ ನೀಡಬೇಕಿತ್ತು. ಹಾಗಾಗದೇ ಅವರ ಹೈಕಮಾಂಡಿನಿಂದಲೇ ಅವರ ಕೈ ಕಟ್ಟಿಹಾಕುವ ಕೆಲಸವಾಗುತ್ತಿದೆ ಎಂದರು.

ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗಡುತ್ತಿದೆ. ರಾಜ್ಯ ಸರ್ಕಾರವು ಒಂದು ಉಪಮುಖ್ಯಮಂತ್ರಿ ಇರುವುದನ್ನು ಈಗ ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿಸಿ ಎಂಬ ಕೂಗು ಹೆಚ್ಚಾಗಿ ಕೇಳಿಬರುತ್ತಿತ್ತು. ಈಗ ಮುಖ್ಯಮಂತ್ರಿ ಬದಲಾವಣೆಯಾಗಲಿ ಎನ್ನುವ ಗೊಂದಲದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಈ ಮೂಲಕ ಯಾರ ಮನಸಲ್ಲಿ ಏನಿದೆ ಎನ್ನುವುದನ್ನು ಬೇರೆಯವರಿಂದ ಹೇಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ನಾನು ಹಿಂದೆ ಕಾಂಗ್ರೆಸ್‌ನಲ್ಲಿ ಇದ್ದರೂ ಕೂಡ ಈ‌ ಬಗ್ಗೆ ಗೊತ್ತಾಗಿರಲಿಲ್ಲ. ಬಿಜೆಪಿ ಆಪರೇಷನ್ ಕಮಲ ಮಾಡುವುದು ಬೇಕಾಗಿಲ್ಲ, ಕಾಂಗ್ರೆಸ್‌ನ ಒಳ ಬೇಗುದಿ, ಶಾಸಕರ ಅಸಮಾಧಾನವೇ ಸರ್ಕಾರದ ಮೇಲೆ ಪರಿಣಾಮ ಬೀರಲಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಲೋಕಸಭಾ ಚುನಾವಣೆಯಲ್ಲಿ ಲಾಭವಾಗಲಿದೆ ಎಂದು ಕಾಂಗ್ರೆಸ್ಸಿನವರು ತಿಳಿದುಕೊಂಡಿದ್ದರು. ಆದರೆ, ಹಾಗಾಗಲಿಲ್ಲ. ಈಗ ಕಾಂಗ್ರೆಸ್‌ ಶಾಸಕರೇ ಗ್ಯಾರಂಟಿ ವಾಪಾಸ್‌ ತೆಗೆದುಕೊಳ್ಳಿ ಎಂದು ಹೇಳುತ್ತಿದ್ದಾರೆ. ಈ ಗ್ಯಾರಂಟಿ ಅನುಷ್ಠಾನಕ್ಕಾಗಿ ಸರ್ಕಾರದ ಖಜಾನೆ ಖಾಲಿಯಾಗುತ್ತಿದೆ. ಸರ್ಕಾರ ವರಮಾನ ಹೆಚ್ಚಿಸಿಕೊಳ್ಳಲು ಪೆಟ್ರೋಲ್‌, ಡೀಸೆಲ್‌, ಹಾಲು, ಬಸ್ ಪ್ರಯಾಣ ದರ ಹೆಚ್ಚಳ ಮಾಡುತ್ತಿದ್ದಾರೆ. ಇದರಿಂದಾಗಿ ಜನಸಾಮಾನ್ಯರು, ಬಡವರು ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದನ್ನೆಲ್ಲ ವಿಚಾರ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ತಗೆದುಕೊಳ್ಳುವುದು ಸೂಕ್ತ ಎಂದರು.

Previous articleಎರಡೇ ತಿಂಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ವ್ಯವಸ್ಥೆ
Next articleಪ್ಯಾರಿಸ್ ಒಲಿಂಪಿಕ್ಸ್‌ಗೆ ಕನ್ನಡತಿ…