Home News ಸುಳ್ಳು ಸುದ್ದಿಗೆ ಬ್ರೇಕ್ ಹಾಕದಿದ್ದರೆ ಪ್ರತಿಯೊಬ್ಬರ ನೆಮ್ಮದಿ ಹಾಳು

ಸುಳ್ಳು ಸುದ್ದಿಗೆ ಬ್ರೇಕ್ ಹಾಕದಿದ್ದರೆ ಪ್ರತಿಯೊಬ್ಬರ ನೆಮ್ಮದಿ ಹಾಳು

ಮೈಸೂರು: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಮಾನಸ ಗಂಗೋತ್ರಿ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಅವರು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಒತ್ತಿ ಹೇಳಿದ್ದರು. ಕೆಲವು ತಿಂಗಳ ಹಿಂದೆ “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ. ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

Exit mobile version