Home ಅಪರಾಧ ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

0

ಹಾವೇರಿ: ಇತ್ತೀಚೆಗೆ ಹತ್ಯೆಗೀಡಾದ ರಟ್ಟೀಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಕ್ಷೇತ್ರದ ಶಾಸಕ ಯು.ಬಿ. ಬಣಕಾರ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸ್ವಾತಿ ಹತ್ಯೆ ಪ್ರಕರಣ ವಿವರಿಸಿ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಯಾವುದೇ ಕಾರಣಕ್ಕೂ ಅಪರಾಧಿಗಳು ಶಿಕ್ಷೆಯಿಂದ ಪಾರಾಗುವ ಅವಕಾಶ ನೀಡುವುದಿಲ್ಲ. ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದ್ದು, ಹತ್ಯೆ ಮಾಡಿದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಪ್ರಕರಣವನ್ನು ದುರ್ಬಲಗೊಳಿಸದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಣೆಬೆನ್ನೂರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾತಿ ಬ್ಯಾಡಗಿ ಅವರು ಮಾ. 2ರಂದು ಕೆಲಸಕ್ಕೆ ಹೋದವರು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ನಾಪತ್ತೆ ದೂರು ದಾಖಲು ಮಾಡಿದ್ದರು. ಮಾ. 6ರಂದು ರಾಣೆಬೆನ್ನೂರು ತಾಲೂಕಿನ ಪತ್ಯಾಪುರ ಬಳಿ ತುಂಗಭದ್ರಾ ನದಿ ದಡದಲ್ಲಿ ಶವ ಪತ್ತೆಯಾಗಿತ್ತು. ಪೊಲೀಸರು ತನಿಖೆ ಕೈಗೊಂಡಾಗ ಈ ಶವ ಸ್ವಾತಿ ಅವರದ್ದು. ಅವರನ್ನು ಕೊಲೆ ಮಾಡಿ ನದಿಗೆ ಎಸೆಯಲಾಗಿದೆ ಎನ್ನುವುದು ತಿಳಿದುಬಂದಿತ್ತು.

Exit mobile version