ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಸಂಬಂಧ ಗುರುವಾರ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕಾರಣಾಂತರಗಳಿಂದ ತಾವು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದಿದ್ದಾರೆ.
ಮೇ ೧೮ರಂದು ತಾವು ೯೧ ವರ್ಷ ಪೂರೈಸಿ ೯೨ನೇ ವರ್ಷಕ್ಕೆ ಕಾಲಿಡುತ್ತಿದ್ದು. ಅಭಿಮಾನಿಗಳು ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಇದ್ದಲ್ಲಿಯೇ ಶುಭ ಹಾರೈಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಇದೇ ವೇಳೆ ಪ್ರಸ್ತುತ ನಡೆಯುತ್ತಿರುವ ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು. ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ದೇವೇಗೌಡರು ಪಕ್ಷದ ಕಾರ್ಯಕರ್ತರು-ಮುಖಂಡರಿಗೆ ಕರೆ ನೀಡಿದ್ದಾರೆ.