ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಬೆನ್ನಲ್ಲೆ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಯಿಂದಾಗಿ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ-ಯಲಗುಪ್ಪಾ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಎರಡು ಬದಿ ವಾಹನಗಳು ಸಾಲುಗಟ್ಟುವಂತಾಗಿದೆ. ಇದರಿಂದ ಹೊನ್ನಾವರ-ಗೇರುಸೊಪ್ಪ-ಸಾಗರ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.
ಇನ್ನು ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಹೆದ್ದಾರಿಯಲ್ಲಿ ಬಿದ್ದಿರುವ ಮಣ್ಣು ತೆರವಿಗೆ ತಾಲ್ಲೂಕಾಡಳಿತ ಮುಂದಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಮಾಡಿ ಗುಡ್ಡ ತೆರವು ಮಾಡುವ ಪ್ರಯತ್ನ ಮುಂದುವರಿಸಿದ್ದಾರೆ.
ಸದ್ಯ ಪೊಲೀಸರು ಏಕಮುಖ ವಾಹನ ಸಂಚಾರಕ್ಕೆ ಅವಕಾಶ ನೀಡಿದ್ದು, ಇದೀಗ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯತ್ನ ಮುಂದುವರಿಸಲಾಗಿದೆ.