Home ತಾಜಾ ಸುದ್ದಿ 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಕುವೈತ್‌ಗೆ

43 ವರ್ಷಗಳ ಬಳಿಕ ಭಾರತದ ಪ್ರಧಾನಿ ಕುವೈತ್‌ಗೆ

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಕುವೈತ್ ಪ್ರವಾಸ ಕೈಗೊಳ್ಳಲಿದ್ದಾರೆ.
43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಗಲ್ಫ್ ರಾಷ್ಟ್ರಕ್ಕೆ ಮೊದಲ ಪ್ರವಾಸ ಮಾಡಲಿದ್ದಾರೆ. 1981ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಕುವೈತ್‌ಗೆ ಭೇಟಿ ನೀಡಿದ್ದರು. ಅದಾದ ಬಳಿಕ 2009ರಲ್ಲಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಕುವೈತ್ ಪ್ರವಾಸ ಕೈಗೊಂಡಿದ್ದರು. 2013ರಲ್ಲಿ ಕುವೈತ್‌ನ ಪ್ರಧಾನಿ ಭಾರತಕ್ಕೆ ಭೇಟಿ ನೀಡಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋದಿ ಮತ್ತು ಕುವೈತ್‌ ದೊರೆ ಪರಸ್ಪರ ಭೇಟಿಯಾಗಿದ್ದರು. ಭಾರತ ಮತ್ತು ಕುವೈತ್ ನಡುವಿನ “ಬಹುಮುಖಿ” ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಅವಕಾಶವನ್ನು ಒದಗಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.ರಾಜಕೀಯ, ವ್ಯಾಪಾರ, ಹೂಡಿಕೆ, ಹೈಡ್ರೋ ಕಾರ್ಬನ್ ಮತ್ತು ಆರೋಗ್ಯ ಸೇರಿದಂತೆ ಹಲವು ವಲಯಗಳಿಗೆ ಸಂಬಂಧಿಸಿದಂತೆ ದ್ವಿಪಕ್ಷೀಯ ಸಹಕಾರ ವಿಸ್ತರಣೆ ಕುರಿತು ಮಾತುಕತೆ ನಡೆಯಲಿದೆ. ಭೇಟಿ ವೇಳೆ ಪ್ರಧಾನಿ ಕುವೈತಿನ ಸೇನಾ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಪ್ರಧಾನಿ ಕುವೈತ್ ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದು, ಅಲ್ಲಿನ ಕಾರ್ಮಿಕ ಕ್ಯಾಂಪ್ ಗೆ ಭೇಟಿ ನೀಡಲಿದ್ದಾರೆ. ಶೇಖ್ ಸಾದ್ ಅಲ್ ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ‘ಹಲಾ ಮೋದಿ’ ಮೆಗಾ ಕಾರ್ಯಕ್ರಮಕ್ಕೆ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಸುಮಾರು 5,000 ಜನರು ಭಾಗವಹಿಸುವ ನಿರೀಕ್ಷೆಯಿದೆ. ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಕುವೈತ್‌ನಲ್ಲಿ ಸುಮಾರು 10 ಲಕ್ಷ ಭಾರತೀಯರು ವಾಸವಾಗಿದ್ದಾರೆ ಎಂದು ಹೇಳಿದರು.

Exit mobile version