KSRTC: ಮಾತುಕತೆ ಭರವಸೆ, ಮುಷ್ಕರ ವಾಪಸ್‌ಗೆ ಕರೆ. ಮಂಗಳವಾರ ಬಸ್ ಇರುತ್ತೋ, ಇಲ್ವೋ?

0
111

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಸರ್ಕಾರಿ ಬಸ್‌ಗಳ ಸಂಚಾರ ಇರಲಿದೆಯೇ?. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಮುಷ್ಕರ ಆರಂಭವಾಗಲಿದೆಯೇ? ಎಂಬುದು ಸದ್ಯದ ಪ್ರಶ್ನೆ. ಕರ್ನಾಟಕ ಹೈಕೋರ್ಟ್ ಮುಷ್ಕರವನ್ನು ಮುಂದೂಡಿ ಎಂದು ಸೂಚನೆಯನ್ನು ನೀಡಿದೆ.

ವೇತನ ಪರಿಷ್ಕರಣೆಯನ್ನು 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ನಡೆಸಬೇಕು. ಹಿಂದಿನ ಪರಿಷ್ಕರಣೆಯ ನಂತರದ 38 ತಿಂಗಳ ಹೆಚ್ಚುವರಿ ವೇತನ ಬಾಕಿ ನೀಡಬೇಕು ಎಂಬ 2 ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್‌ 5ರಿಂದ ಮುಷ್ಕರಕ್ಕೆ ಕರೆ ನೀಡಿದೆ.

ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮುಷ್ಕರ ವಾಪಸ್ ಪಡೆಯಲು ಸಿಎಂ ಕರೆ: ಸಭೆಯಲ್ಲಿ ಚರ್ಚಿಸಿದ ಅಂಶಗಳನ್ನು ಮುಖ್ಯಮಂತ್ರಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಮುಷ್ಕರವನ್ನು ವಾಪಸ್ ಪಡೆಯಬೇಕು ಎಂದು ಕರೆ ನೀಡಿದ್ದಾರೆ.

  • ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ಮಂಗಳವಾರ ಕರೆದಿರುವ ಮುಷ್ಕರವನ್ನು ವಾಪಾಸು ಪಡೆಯಬೇಕು.
  • 2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ 12.5ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 2023ರ ಮೇ 1ರ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.
  • ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 2022ರ ಜೂನ್‌ 1 ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು.
  • ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 2023ರ ಮಾರ್ಚ್‌ 01 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ.
  • ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4 ಸಾವಿರ ಕೋಟಿ ಸಾಲ ಇತ್ತು. 2018 ರಲ್ಲಿ ಕೇವಲ ರೂ.14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು.
  • ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ.

ಮುಖ್ಯಮಂತ್ರಿಗಳ ಮನವಿ, ಹೈಕೋರ್ಟ್ ಸೂಚನೆ ಬಳಿಕವೂ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್‌.ವಿ.ಅನಂತಸುಬ್ಬರಾವ್ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಮುಷ್ಕರ ನಡೆಸುತ್ತೇವೆ. ಯಾವುದೇ ಬಸ್‌ಗಳು ಡಿಪೋದಿಂದ ಹೊರ ಬರುವುದಿಲ್ಲ ಎಂದು ಹೇಳಿದ್ದಾರೆ. ಮಂಗಳವಾರ ಸರ್ಕಾರಿ ಬಸ್‌ಗಳ ಸಂಚಾರ ಇದೆಯೇ?, ಇಲ್ಲವೇ? ಎಂಬುದು ಗೊಂದಲದ ಗೂಡಾಗಿದೆ.

Previous articleನೇಹಾ ಹತ್ಯೆ: ಜಾಮೀನು ಅರ್ಜಿ ವಜಾ, ಹಂತಕನಿಗೆ ಜೈಲೂಟವೇ ಗತಿ
Next articleRishabh Pant: ಕರ್ನಾಟಕದ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾದ ಕ್ರಿಕೆಟಿಗ

LEAVE A REPLY

Please enter your comment!
Please enter your name here