ಬೆಂಗಳೂರು: ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಜಿಲ್ಲೆಯೊಳಗೆ ನಿಯೋಜನೆ ಮಾಡುವ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆಡಳಿತಾತ್ಮಕ ಅಧಿಕಾರವನ್ನು ನೀಡಲಾಗಿದೆ.
ಕರ್ನಾಟಕ ಸರ್ಕಾರ ಈ ಕುರಿತು ಆದೇಶವನ್ನು ಹೊರಡಿಸಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಡಾ.ಎನ್.ನೋಮಶ್ ಕುಮಾರ್ ನಿರ್ದೇಶಕರು (ಪಂ.ರಾಜ್) ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ.
ಈ ಆದೇಶ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಜಿಲ್ಲೆಯೊಳಗೆ ನಿಯೋಜನೆ ಮೇರೆಗೆ ನೇಮಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಆಡಳಿತಾತ್ಮಕ ಅಧಿಕಾರ ಪ್ರತ್ಯಾಯೋಜಿಸಿರುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ಅನ್ನು ರಚಿಸಲಾಗಿದೆ.
ಅದರನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಕ್ರಮ ವಹಿಸಲಾಗುತ್ತಿದೆ. ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯನಿರತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪೈಕಿ ಶೇಕಡಾ 4ರಷ್ಟು ಮೀರದಂತೆ ಆಡಳಿತಾತ್ಮಕ ಹಿತದೃಷ್ಠಿಯಿಂದ ಖಾಲಿ ಇರುವ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಜಿಲ್ಲೆಯೊಳಗೆ ನಿಯೋಜನೆ ಮೇರೆಗೆ ನೇಮಿಸಲು ಆಡಳಿತಾತ್ಮಕ ಅಧಿಕಾರ ಪ್ರತ್ಯಾಯೋಜಿಸಲು ಸರ್ಕಾರವು ನಿರ್ಧರಿಸಿದೆ.
ಸರ್ಕಾರದ ಆದೇಶ: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯನಿರತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪೈಕಿ ಶೇಕಡಾ 4 ರಷ್ಟು ಮೀರದಂತೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಖಾಲಿ ಇರುವ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ನಿಯೋಜನೆ ಮಾಡಲು ಅವಕಾಶ ನೀಡಿದೆ.
ಈ ಷರತ್ತಿಗೊಳಪಟ್ಟು ಜಿಲ್ಲೆಯೊಳಗೆ ನಿಯೋಜನೆ ಮೇರೆಗೆ ನೇಮಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಆಡಳಿತಾತ್ಮಕ ಅಧಿಕಾರ ಪತ್ಯಾಯೋಜಿಸಿ ಆದೇಶಿಸಲಾಗಿದೆ.
ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕನಿಷ್ಠ ಮೂರು ವರ್ಷವಾದರೂ ವರ್ಗಾವಣೆಗೊಂಡ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಕಳೆದ 3 ವರ್ಷಗಳಲ್ಲಿ ನಿಯೋಜನೆ ಮೇರೆಗೆ ಅಥವ ವರ್ಗಾವಣೆಯಿಂದ ಕಾರ್ಯ ನಿರ್ವಹಿಸಿದ ಗ್ರಾಮ ಪಂಚಾಯಿತಿಗೆ ನಿಯೋಜಿಸತಕ್ಕದ್ದಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯಿತಿಯ ಆಡಳಿತಾತ್ಮಕ ಮುಖ್ಯಸ್ಥರಾಗಿದ್ದಾರೆ. ಅವರು ಪಂಚಾಯಿತಿ ಕಾರ್ಯಕ್ರಮಗಳ ಅನುಷ್ಠಾನ, ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಣೆ ಮತ್ತು ಪಂಚಾಯಿತಿ ಆಡಳಿತವನ್ನು ನೋಡಿಕೊಳ್ಳುತ್ತಾರೆ. ಜಿಲ್ಲಾ ಪಂಚಾಯಿತಿ ಸಿಇಒ ಅವರು ಪಿಡಿಒಗಳ ಕಾರ್ಯ ವೈಖರಿ ಉಸ್ತುವಾರಿ ನೋಡಿಕೊಳ್ಳುತ್ತಾರೆ.