ಬೆಂಗಳೂರು: ತಕ್ಷಣವೇ ಸಾರಿಗೆ ಮುಷ್ಕರವನ್ನು ನಿಲ್ಲಿಸಿ ಇಲ್ಲವೇ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಹೈಕೋರ್ಟ್ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ.
ಹೈಕೋರ್ಟ್‌ನಲ್ಲಿ ಸಾರಿಗೆ ಮುಷ್ಕರ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ. ಜೋಷಿ ಅವರಿದ್ದ ಪೀಠ, ನಾಳೆಯಿಂದ ಎಂದಿನಂತೆ ಬಸ್ ಸಂಚಾರ ನಡೆಸುವಂತೆ ಸೂಚಿಸಿದ್ದು, 2 ದಿನಗಳ ಕಾಲ ಮಧ್ಯಂತರ ಆದೇಶ ವಿಸ್ತರಿಸಿ ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದೆ.
ಜನಸಾಮಾನ್ಯರಿಗೆ ತೊಂದರೆ ನೀಡುವುದನ್ನು ಸಹಿಸಲ್ಲ, ಎಸ್ಮಾ ಜಾರಿಯಾಗಿದ್ದರೂ ಮುಷ್ಕರ ಮಾಡುತ್ತೀರಿ ಎಂದು ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಗರಂ ಆಗಿದ್ದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಮುಷ್ಕರ ಕೈ ಬಿಡದಿದ್ದರೆ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು ಎಂದು ಕೋರ್ಟ್ ಹೇಳಿದೆ.
ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡದೇ ಇದ್ದರೇ, ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಎಂದು ಹೈಕೋರ್ಟ್ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಗೆ ವಾರ್ನಿಂಗ್ ನೀಡಿದೆ. ಇದರಿಂದಾಗಿ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸುವುದಿಲ್ಲ ಎಂದು ಜಂಟಿ ಕ್ರಿಯಾ ಸಮಿತಿಯ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಕೆಲಸಕ್ಕೆ ಹಾಜರಾಗಲು ಸೂಚನೆ: ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ಸಾರಿಗೆ ಮುಷ್ಕರ ಮುಂದೂಡಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಅಲ್ಲದೇ “ತಕ್ಷಣ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗಿ” ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ.
“ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆಯಾಗಿದ್ದು ಸರ್ಕಾರ ಮಾತುಕತೆಗೆ ಕರೆದರೆ ಹೋಗುತ್ತೇವೆ. ಈ ಕ್ಷಣದಿಂದಲೇ ನೌಕರರು ಕರ್ತವ್ಯಕ್ಕೆ ಹಾಜರಾಗಿ” ಎಂದು ಸಾರಿಗೆ ನೌಕರರಿಗೆ ಸಮಿತಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಸೂಚನೆ ನೀಡಿದ್ದಾರೆ.
ಮುಷ್ಕರದ ವೇಳೆ ಕಲ್ಲು ತೂರಾಟ: ಗದಗದಲ್ಲಿ ಇಬ್ಬರು ಮುಸುಕು ಧಾರಿಗಳು ಹೊಸಪೇಟೆ ವಿಭಾಗದ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಬಸ್‌ಗಳ ಮುಂಭಾಗಕ್ಕೆ ಹಾನಿಯಾಗಿದೆ. ಇದನ್ನು ಬಿಟ್ಟರೆ ಉಳಿದ ಯಾವುದೇ ಜಿಲ್ಲೆಗಳಲ್ಲಿ ಅಹಿತಕರ ಘಟನೆಗಳು ಜರುಗಿಲ್ಲ. ಆದರೆ, ಬಸ್ ಇಲ್ಲದಿರುವುದನ್ನು ಆಟೋ ಚಾಲಕರು ಬಂಡವಾಳ ಮಾಡಿಕೊಂಡು ಜನರನ್ನು ಸುಲಿಗೆ ಮಾಡುತ್ತಿದ್ದ ಘಟನೆಗಳು ಬೆಂಗಳೂರು ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ನಡೆದಿದೆ. ಪ್ರಯಾಣಿಕರನ್ನು ಕರೆದೊಯ್ಯಲು ಬಾಯಿಗೆ ಬಂದಷ್ಟು ದರವನ್ನು ಆಟೋ ಚಾಲಕರು ಹೇಳುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದರು.