ವಾಂಗ್ಚುಕ್ ಆರೋಗ್ಯ ಹದಗೆಟ್ಟ ಬೆನ್ನಲ್ಲೇ ಹೊಸ ಹಂತಕ್ಕೆ ಜಂತರ್ ಮಂತರ್ ಪ್ರತಿಭಟನೆ : ಅಭಿಜೀತ್ ದೀಪ್ಕೆ ಅನಿರ್ದಿಷ್ಟಾವಧಿ ಉಪವಾಸ ಘೋಷಣೆ
ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧದ ಪ್ರತಿಭಟನೆ ಹೊಸ ಹಂತಕ್ಕೆ ಕಾಲಿಟ್ಟಿದೆ. ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ, ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿರುವ ಅಭಿಜೀತ್ ದೀಪ್ಕೆ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಜಂತರ್ ಮಂತರ್‌ನಿಂದ ಹೊರಬಂದ ಇತ್ತೀಚಿನ ದೃಶ್ಯಗಳಲ್ಲಿ ಪ್ರತಿಭಟನಾಕಾರರು ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುತ್ತಿರುವುದು ಕಂಡುಬಂದಿದ್ದು, ಅಭಿಜೀತ್ ದೀಪ್ಕೆ ಅಧಿಕೃತವಾಗಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: 20 ದಿನಗಳ ಉಪವಾಸ: ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು
ಮೋದಿ ರಾಜೀನಾಮೆಗೆ ಒತ್ತಾಯ: ಕೊಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ತಮ್ಮನ್ನು ಪೊಲೀಸರು ಥಳಿಸಿ ವಶಕ್ಕೆ ಪಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದೆಡೆ, ಪೊಲೀಸರು ಪ್ರತಿಭಟನಾಕಾರರಿಗೆ ಸಾಧ್ಯವಾದಷ್ಟು ಬೇಗ ಜಂತರ್ ಮಂತರ್ ತೆರವುಗೊಳಿಸುವಂತೆ ಅಲ್ಟಿಮೇಟಮ್ ನೀಡಿದ್ದಾರೆ. ಇದರೊಂದಿಗೆ, ಈಗ ಸಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆಗೆ ಒತ್ತಾಯಿಸಿದೆ.
21ನೇ ದಿನ ಆರೋಗ್ಯ ಹದಗೆಟ್ಟ ವಾಂಗ್ಚುಕ್ : ದೆಹಲಿ ಪೊಲೀಸರ ಪ್ರಕಾರ, ಸೋನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹ 21ನೇ ದಿನಕ್ಕೆ ಕಾಲಿಟ್ಟಿದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಕುಸಿತ ಕಂಡುಬಂದಿತ್ತು. ವೈದ್ಯಕೀಯ ತಜ್ಞರ ಸಲಹೆ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ಅವರನ್ನು ಶನಿವಾರ ಮುಂಜಾನೆ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ರೈತರು ಕಡಿಮೆ ನೀರಿನ ಬೆಳೆಗಳತ್ತ ಮುಖ ಮಾಡಲಿ: ಸುಷ್ಮಾ ಗೋಡಬೋಲೆ
ಹೋರಾಟ ಮುಂದುವರಿಸುವ ಸಂಕಲ್ಪ : ವಾಂಗ್ಚುಕ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಸ್ಥಗಿತಗೊಳ್ಳುವುದಿಲ್ಲ ಎಂದು ಹೋರಾಟದ ಸಂಘಟಕರು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಜೀತ್ ದೀಪ್ಕೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಸರ್ಕಾರವು ಪ್ರತಿಭಟನಾಕಾರರ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ಜಂತರ್ ಮಂತರ್‌ಗೆ ಆಗಮಿಸಿ ಹೋರಾಟಕ್ಕೆ ಬೆಂಬಲ ನೀಡುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಪ್ರಮುಖ ಬೇಡಿಕೆಗಳು: ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಮುಂದೆ ಕೆಲ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಹೆಚ್ಚಿಸುವ ಸಮಗ್ರ ಸುಧಾರಣೆಗಳನ್ನು ಜಾರಿಗೊಳಿಸಬೇಕು. ಪರೀಕ್ಷಾ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
ಪ್ರತಿಭಟನಾಕಾರರ ಅಭಿಪ್ರಾಯದಂತೆ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ವಿಷಯದಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕಾಗಿದೆ.



















