ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದ ನಿಧಿಯ ದುರುಪಯೋಗ ಆರೋಪ ಪ್ರಕರಣವು ಹೊಸ ತಿರುವು ಪಡೆದುಕೊಂಡಿದ್ದು, ಉತ್ತರ ಪ್ರದೇಶದ ಫೈಜಾಬಾದ್ ಬಾರ್ ಅಸೋಸಿಯೇಷನ್ ಆರೋಪಿಗಳ ವಿರುದ್ಧ ಕಠಿಣ ನಿಲುವು ತಾಳಿದೆ. ಪ್ರಕರಣದ ಆರೋಪಿಗಳ ಪರವಾಗಿ ಯಾವುದೇ ವಕೀಲರು ವಾದಿಸಬಾರದು ಎಂದು ಸಂಘವು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿದೆ.
ಸೋಮವಾರ ನಡೆದ ಫೈಜಾಬಾದ್ ಬಾರ್ ಅಸೋಸಿಯೇಷನ್‌ನ ಸಾಮಾನ್ಯ ಸಭೆಯಲ್ಲಿ, ಪ್ರಕರಣದ ಆರೋಪಿಗಳ ಪರವಾಗಿ ವಕಾಲತ್ತು ವಹಿಸುವ ಯಾವುದೇ ಸದಸ್ಯರಿಗೆ ₹5 ಲಕ್ಷ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ನಿರ್ಧಾರವು ಸ್ಥಳೀಯ ವಕೀಲರ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ವಿಜಯೇಂದ್ರರನ್ನು ಕಿಕ್ ಔಟ್ ಮಾಡಿ: ವೈರಲ್ Audio ಸೃಷ್ಟಿಸಿದ ತಲ್ಲಣ
ಸಭೆಯಲ್ಲಿ ಭಾಗವಹಿಸಿದ್ದ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ವ್ಯಕ್ತಿಗಳಾದ ಚಂಪತ್ ರಾಯ್, ಅನಿಲ್ ಮಿಶ್ರಾ ಹಾಗೂ ಗೋಪಾಲ್ ರಾವ್ ಅವರನ್ನು ಮೂರು ದಿನಗಳ ಒಳಗೆ ಅಯೋಧ್ಯೆಯಿಂದ ತೆರಳಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನಗರವನ್ನು ಮುತ್ತಿಗೆ ಹಾಕುವ ಎಚ್ಚರಿಕೆಯನ್ನೂ ನೀಡಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಇತ್ತೀಚೆಗೆ ಮತ್ತೊಬ್ಬ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೇ ವೇಳೆ ದೇವಾಲಯದ ನಿಧಿ ದುರುಪಯೋಗದ ಆರೋಪಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿವೆ.
ಇದನ್ನೂ ಓದಿ: CBSE ಶಾಲೆಗಳಲ್ಲಿ ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗಸೂಚಿ
ಫೈಜಾಬಾದ್ ಬಾರ್ ಅಸೋಸಿಯೇಷನ್ ಕಾರ್ಯದರ್ಶಿ ಶೈಲೇಂದ್ರ ಜೈಸ್ವಾಲ್ ಮಾತನಾಡಿ, “ದೇವಾಲಯಕ್ಕೆ ಭಕ್ತರು ನೀಡಿದ ಕಾಣಿಕೆಗಳ ಅಕ್ರಮ ಬಳಕೆ ನಮ್ಮ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಆದ್ದರಿಂದ ಎಲ್ಲಾ ವಕೀಲರು ಆರೋಪಿಗಳ ಪರವಾಗಿ ವಾದಿಸದಿರಲು ಒಮ್ಮತ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.
ಇದಾದ ಬಳಿಕ ಬಾರ್ ಅಸೋಸಿಯೇಷನ್ ಅಧ್ಯಕ್ಷ ಕಾಳಿಕಾ ಪ್ರಸಾದ್ ಮಿಶ್ರಾ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, “ಯಾವುದೇ ವಕೀಲರು ಆರೋಪಿಗಳ ಪರವಾಗಿ ವಕಾಲತ್ತು ವಹಿಸಬಾರದು. ಈ ನಿರ್ಧಾರವನ್ನು ಉಲ್ಲಂಘಿಸಿದರೆ ₹5 ಲಕ್ಷ ದಂಡ ವಿಧಿಸಲಾಗುತ್ತದೆ” ಎಂದು ಅವರು ಹೇಳಿರುವುದು ಕಂಡುಬಂದಿದೆ.
ಇದನ್ನೂ ಓದಿ: ಭೂಕುಸಿತದಲ್ಲಿ ಸಿಲುಕಿ ಪಾರಾದ ಬೈಕ್ ಸವಾರ: Video ವೈರಲ್
ಇದೇ ವೇಳೆ, ಚಂಪತ್ ರಾಯ್, ಅನಿಲ್ ಮಿಶ್ರಾ ಮತ್ತು ಗೋಪಾಲ್ ರಾವ್ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯದ ಮೊರೆ ಹೋಗಲು ಬಾರ್ ಅಸೋಸಿಯೇಷನ್ ತೀರ್ಮಾನಿಸಿದೆ. ಜೊತೆಗೆ ಪ್ರಕರಣದ ಸಿಬಿಐ ತನಿಖೆಗೆ ಆದೇಶಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.
ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯುತ್ತಿದ್ದು, ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ತನಿಖೆಯ ಭಾಗವಾಗಿ ಚಂಪತ್ ರಾಯ್ ಅವರ ಹೇಳಿಕೆಯನ್ನು ಸಹ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮತ್ತೆ ಖರ್ಗೆ ಪಯಣ: ಪ್ರಮಾಣ ವಚನ ಸ್ವೀಕಾರ
2005ರಲ್ಲಿ ಅಯೋಧ್ಯೆಯ ರಾಮ ಮಂದಿರದ ಮೇಲಿನ ಭಯೋತ್ಪಾದಕ ದಾಳಿ ಪ್ರಕರಣದಲ್ಲಿಯೂ ಆರೋಪಿಗಳ ಪರವಾಗಿ ವಾದಿಸದಿರಲು ಇದೇ ಫೈಜಾಬಾದ್ ಬಾರ್ ಅಸೋಸಿಯೇಷನ್ ನಿರ್ಧರಿಸಿತ್ತು. ಈಗ ಮತ್ತೆ ಅದೇ ರೀತಿಯ ನಿರ್ಧಾರ ಕೈಗೊಂಡಿರುವುದು ಗಮನಾರ್ಹವಾಗಿದೆ.





















