ನವದೆಹಲಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಗಳ್ಳತನ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಿ, ದೇಶದ್ರೋಹದ ಪ್ರಕರಣದಡಿ ಜೈಲಿಗೆ ಕಳುಹಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನವೆಂಬರ್ 1ರಂದು ನಡೆದ INDIA ಮೈತ್ರಿಕೂಟದ ʻವೋಟ್ ಬಚಾವೋ, ದೇಶ ಬಚಾವೋ’ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೂ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಕಾನೂನಿನಿಂದ ತಪ್ಪಿಸಿಕೊಳ್ಳುವ ಆಲೋಚನೆ ಮಾಡಬಾರದು ಎಂದರು.
ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ INDIA ಮೈತ್ರಿಕೂಟದ ಹಲವು ನಾಯಕರು ಭಾಗವಹಿಸಿದ್ದರು.
ಮತದಾರರ ಪಟ್ಟಿಯಿಂದ ಕೋಟ್ಯಂತರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರೆ, ಅರ್ಹವಲ್ಲದ ಮತ್ತು ನಕಲಿ ಹೆಸರುಗಳನ್ನು ತೆಗೆದುಹಾಕಲು ಪರಿಷ್ಕರಣೆ ನಡೆಸಲಾಗುತ್ತಿದೆ ಎಂಬುದು ಚುನಾವಣಾ ಆಯೋಗದ ಸಮರ್ಥನೆಯಾಗಿದೆ. ಈ ವಿಚಾರ ಇದೀಗ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.






















