SK Home Ad
Home ಸುದ್ದಿ ದೇಶ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ದೀಪ್ಕೆಗೆ ಕಪಾಳಮೋಕ್ಷ: ಇಬ್ಬರು ವಶಕ್ಕೆ

ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ದೀಪ್ಕೆಗೆ ಕಪಾಳಮೋಕ್ಷ: ಇಬ್ಬರು ವಶಕ್ಕೆ

0
100

ಜೈಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ನಿರುದ್ಯೋಗ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಜೈಪುರದಲ್ಲಿ ನಡೆದ ಪ್ರತಿಭಟನೆಯ ವೇಳೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರಿಗೆ ಕೆಲ ಯುವಕರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ನಗರದ ಶಹೀದ್ ಸ್ಮಾರಕ್ ಬಳಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ದೀಪ್ಕೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದಾಗ ಬೆಂಬಲಿಗರು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಾಗಿಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕೆಲ ಯುವಕರು ಏಕಾಏಕಿ ಅವರ ಮೇಲೆ ಹಲ್ಲೆ ನಡೆಸಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ಹಾಗೂ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯ ಬಳಿಕ ದೀಪ್ಕೆ ಬೆಂಬಲಿಗರು ಆರೋಪಿಗಳನ್ನು ಹಿಡಿದು ಹಲ್ಲೆ ನಡೆಸಲು ಮುಂದಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಸಿಜೆಪಿ ಸಂಘಟನೆಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.