ನವದೆಹಲಿ: ದೆಹಲಿಯ ರಾಮಲೀಲಾ ಮೈದಾನ ಸಮೀಪದ ತುರ್ಕಮನ್ ಗೇಟ್ ಪ್ರದೇಶದಲ್ಲಿರುವ ಫೈಜ್-ಎ-ಇಲಾಹಿ ಮಸೀದಿಯ ಬಳಿಯ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಬುಧವಾರ (ಜ.07) ನಸುಕಿನ ಜಾವ ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಬುಧವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾರ್ಯಾಚರಣೆ ಆರಂಭಿಸಿತು. ರಾಮಲೀಲಾ ಮೈದಾನದಲ್ಲಿರುವ ಮಸೀದಿ ಹಾಗೂ ಸ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯಲ್ಲಿ ನಿರ್ಮಾಣಗೊಂಡಿದ್ದ ಸುಮಾರು 100 ವರ್ಷಗಳಷ್ಟು ಹಳೆಯ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವುದು ಕಾರ್ಯಾಚರಣೆಯ ಉದ್ದೇಶವಾಗಿತ್ತು ಎಂದು ಎಂಸಿಡಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಚಂದ್ರಶೇಖರ್ ಉಡುಪ ನಿಧನ
ಕಾರ್ಯಾಚರಣೆಯ ವೇಳೆ ಪೊಲೀಸರು ಮತ್ತು ಎಂಸಿಡಿ ಸಿಬ್ಬಂದಿ ಅತಿಕ್ರಮಣ ತೆರವು ಕಾರ್ಯದಲ್ಲಿ ತೊಡಗಿದ್ದಾಗ, ಸ್ಥಳದಲ್ಲಿದ್ದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಒಳನುಗ್ಗಲು ಯತ್ನಿಸಿ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡು, ಹಲವಾರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಸಿಡಿಸುವ ಮೂಲಕ ಪ್ರತಿಭಟನಾಕಾರರನ್ನು ಚದುರಿಸಿದರು. ಘಟನೆಯ ಸಂಬಂಧ ಹತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತಿಕ್ರಮಣ ತೆರವು ಕಾರ್ಯಾಚರಣೆಗೆ ಒಟ್ಟು 17 ಬುಲ್ಡೋಜರ್‌ಗಳನ್ನು ನಿಯೋಜಿಸಲಾಗಿದ್ದು, ಭದ್ರತೆಗೆ ಭಾರೀ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ದೆಹಲಿ ಹೈಕೋರ್ಟ್ ಅನಧಿಕೃತ ರಚನೆಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಎಂಸಿಡಿ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: KPS ಶಿಕ್ಷಣಕ್ಕೆ ಸಂಜೀವಿನಿಯೋ? ಹಳ್ಳಿ ಶಾಲೆಗೆ ಮರಣಶಾಸನವೋ?
ಇದಕ್ಕೂ ಮೊದಲು ರಾಮಲೀಲಾ ಮೈದಾನದಲ್ಲಿರುವ ಮಸೀದಿ ಮತ್ತು ಸ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯಿಂದ ಅತಿಕ್ರಮಣಗಳನ್ನು ತೆರವುಗೊಳಿಸುವ ಎಂಸಿಡಿ ನಿರ್ಧಾರವನ್ನು ಪ್ರಶ್ನಿಸಿ ಸೈಯದ್ ಇಲಾಹಿ ಮಸೀದಿಯ ವ್ಯವಸ್ಥಾಪಕ ಸಮಿತಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ಮೇರೆಗೆ ನ್ಯಾಯಾಲಯ ಮಂಗಳವಾರ ನೋಟಿಸ್ ಜಾರಿ ಮಾಡಿದ್ದರೂ ಸಹ, ಕೋರ್ಟ್ ಆದೇಶದ ಅನುಸಾರ ಧ್ವಂಸ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಳಿಕ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.




















