ದೆಹಲಿ: ರಾಜಧಾನಿಯ ಹೃದಯ ಭಾಗವಾದ ಬಿಶಂಭರ್ ದಾಸ್ ಮಾರ್ಗದಲ್ಲಿರುವ ಸಂಸತ್ ಸದಸ್ಯರ ವಸತಿ ಸಂಕೀರ್ಣ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ಗಳಲ್ಲಿ ಶನಿವಾರ ಮಧ್ಯಾಹ್ನ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು.
ಮಧ್ಯಾಹ್ನ ಸುಮಾರು 1:20 ಗಂಟೆ ವೇಳೆಗೆ ಅಗ್ನಿಶಾಮಕ ಇಲಾಖೆಗೆ ಬೆಂಕಿಯ ಕುರಿತು ಮಾಹಿತಿ ಲಭಿಸಿದ್ದು, ತಕ್ಷಣವೇ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನ ಆರಂಭಿಸಿವೆ. ಕೆಲವು ಕೋಣೆಗಳಲ್ಲಿ ಹೊಗೆ ತುಂಬಿಕೊಂಡಿದ್ದು, ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿದ್ದಾರೆ.
ಸದ್ಯಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದಾಗ್ಯೂ, ಕೆಲ ಕೋಣೆಗಳಲ್ಲಿ ಹಾನಿ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. 2020 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಈ ಅಪಾರ್ಟ್‌ಮೆಂಟ್ ಸಂಕೀರ್ಣವು ಹಲವಾರು ಲೋಕಸಭಾ ಮತ್ತು ರಾಜ್ಯಸಭಾ ಸಂಸದರ ನಿವಾಸಗಳನ್ನು ಹೊಂದಿದೆ.
ಬೆಂಕಿಯ ಮೂಲ ಕಾರಣ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಈ ಘಟನೆ ಬಳಿಕ ರಾಜ್ಯಸಭಾ ಸದಸ್ಯರು ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ತಾತ್ಕಾಲಿಕವಾಗಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ.