Heavy rain: ಈಶಾನ್ಯ ಮುಂಗಾರು ಚುರುಕುಗೊಂಡಿರುವ ಬೆನ್ನಲ್ಲೇ, ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ದಕ್ಷಿಣ ಭಾರತದಾದ್ಯಂತ ಭಾರೀ ಮಳೆಯನ್ನು ತಂದಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಅಕ್ಟೋಬರ್ 29ರವರೆಗೆ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದ್ದು, ತಮಿಳುನಾಡಿನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡು ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ರಜೆ ಘೋಷಿಸುವ ನಿರ್ಧಾರ ಕೈಗೊಂಡಿದೆ.
ಎಲ್ಲೆಲ್ಲಿ ರಜೆ ಘೋಷಣೆ?: ರಾಜಧಾನಿ ಚೆನ್ನೈನಲ್ಲಿ ಧಾರಾಕಾರ ಮಳೆಯಿಂದಾಗಿ, ಜಿಲ್ಲಾಧಿಕಾರಿ ರಶ್ಮಿಕಾ ಸಿದ್ಧಾರ್ಥ್ ಜಗಡೆ ಬುಧವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಆದೇಶಿಸಿದ್ದಾರೆ. ಇದೇ ರೀತಿ, ಕಡಲೂರು, ವಿಲ್ಲುಪುರಂ, ಮತ್ತು ರಾಣಿಪೇಟೆ ಜಿಲ್ಲೆಗಳಲ್ಲೂ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ತೂತುಕುಡಿ ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಇರಲಿದೆ ಎಂದು ಸ್ಪಷ್ಟಪಡಿಸಲಾಗಿದೆ. ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಕಾರೈಕಲ್‌ನಲ್ಲೂ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ.
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ: ಮಳೆಯ ಆರ್ಭಟ ಕೇವಲ ಭೂಪ್ರದೇಶಕ್ಕೆ ಸೀಮಿತವಾಗಿಲ್ಲ. ಚೆನ್ನೈನ ಪ್ರಸಿದ್ಧ ಮರೀನಾ ಬೀಚ್ ಸೇರಿದಂತೆ ಕರಾವಳಿ ತೀರದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಸಮುದ್ರದ ಅಬ್ಬರ ಹೆಚ್ಚಿರುವ ಸಾಧ್ಯತೆ ಇರುವುದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಲವು ಜಿಲ್ಲೆಗಳಲ್ಲಿ ಈಗಾಗಲೇ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.